ಮೇ 4ರಂದು ಸಾಂಸ್ಕೃತಿಕ ನಗರಿಯಲ್ಲಿ ಅದ್ಧೂರಿ ಟಿಪ್ಪು ಸಮಾವೇಶ
ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಮತ್ತು ಮೈಸೂರು ಪ್ರಗತಿಪರ ಸಂಘಟನೆಗಳ ವತಿಯಿಂದ ಮೇ 4ರಂದು ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ನೆನಪಿನ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಮೈಸೂರು, ಮೇ 2 : ಮೈಸೂರು ಹುಲಿ ಎಂದೇ ಖ್ಯಾತಿ ಪಡೆದಿರುವ ಟಿಪ್ಪುಸುಲ್ತಾನ್ ಸ್ಮರಣಾರ್ಥ ಬೃಹತ್ ಸಮಾವೇಶವನ್ನು ಮೇ 4ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಮತ್ತು ಮೈಸೂರು ಪ್ರಗತಿಪರ ಸಂಘಟನೆಗಳ ವತಿಯಿಂದ ಮೇ 4ರಂದು ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ನೆನಪಿನ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.[ಸಾಂಸ್ಕೃತಿಕ ನಗರಿಯಲ್ಲಿ ಅದ್ಧೂರಿ ಭಗೀರಥ ಜಯಂತಿ ಆಚರಣೆ]

ನಾಡಿನ ಪ್ರಪ್ರಥಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ವೀರಮರಣನಪ್ಪಿ 218 ವರ್ಷಗಳು ಕಳೆದಿವೆ. ಈ ಸಂದರ್ಭದ ಹಿನ್ನಲೆಯಲ್ಲಿ ಮೈಸೂರಿನ ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರು ಅಂದು ಬೆಳಿಗ್ಗೆ 9.30ಕ್ಕೆ, ಶ್ರೀರಂಗಪಟ್ಟಣದ ಟಿಪ್ಪು ಹುತಾತ್ಮನಾದ ಸ್ಥಳದಲ್ಲಿ ಸಾಮವೇಶಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಗೌರವ ಸಲ್ಲಿಸಲಿದ್ದಾರೆ ಎಂದರು.
ಇನ್ನು ಸಮಾರಂಭದಲ್ಲಿ ರಾಜ್ಯ ರೈತ ಸಂಘದ ಕೆ.ಎಸ್.ಪುಟ್ಟಣ್ಣಯ್ಯ, ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಗುರುಪ್ರಸಾದ್ ಕೆರೆಗೋಡು, ಭಾರತೀಯ ಕಮ್ಯುನಿಷ್ಟ್ ಪಕ್ಷದ ಮುಖಂಡ ರಾಧಾ ಸುಂದರೇಶ್ ಮತ್ತು ಡಾ.ಸುಜಯ್ ಪಾಲ್ಗೊಳ್ಳಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.[ಮೈಸೂರು ಪಾಲಿಕೆ ಸದಸ್ಯರ ಕರೆ ಕಡಿತಕ್ಕೆ ಮೇಯರ್ ಗರಂ]
ಮಧ್ಯಾಹ್ನ 12.30ಕ್ಕೆ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಬೃಹತ್ ಬಹಿರಂಗ ಸಮಾವೇಶದಲ್ಲಿ ನಾಡಿನ ಹಿರಿಯ ಚಿಂತಕ ಎ.ಕೆ.ಸುಬ್ಬಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ದೇವನೂರು ಮಹಾದೇವ, ಬೆಟ್ಟಯ್ಯ ಕೋಟೆ, ಕಾಳೇಗೌಡ ನಾಗವಾರ, ಗೌರಿ ಲಂಕೇಶ್, ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಬಂಜಗೆರೆ ಜಯಪ್ರಕಾಶ್, ಮಲ್ಲೇಶ್ ಪಾಲ್ಗೊಳ್ಳಲಿದ್ದಾರೆ. ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಧ್ಯಾಹ್ನ 2.30 ಕ್ಕೆ 'ಭಾರತದ ಸ್ವಾತಂತ್ರ್ಯ ಸಂಗ್ರಾಮ, ಆಧುನಿಕ ಕರ್ನಾಟಕದ ನಿರ್ಮಾಣ ಮತ್ತು ಟಿಪ್ಪು ಸ್ತುಲಾನ್' ಮತ್ತು ಮ.3.30 ಕ್ಕೆ 'ಶೂದ್ರ, ದಲಿತ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಟಿಪ್ಪು ಕೊಡುಗೆ' ಎಂಬ ವಿಷಯಗಳ ವಿಚಾರಗೋಷ್ಠಿ ಇರುತ್ತದೆ. ಸಂಜೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಚಿಂತಕ ಪ.ಮಲ್ಲೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಟಿಪ್ಪು ಸುಲ್ತಾನ್ ಕುರಿತು ಚಿತ್ರ ಪ್ರದರ್ಶನ, ಸೌಹಾರ್ದ ಕಲಾ ತಂಡದಿಂದ ಟಿಪ್ಪು ಲಾವಣಿಗಳ ಗಾಯನ, ಜಾನಪದ ಕಲಾತಂಡಗಳಿಂದ ಕಲಾ ಪ್ರದರ್ಶನ ನಡೆಯಲಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications