Mysuru: ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ತ; ಯುವಕ ಸಾವು
ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕುವೆಂಪು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದ ನಿವಾಸಿ ಜವರೇಗೌಡ ಅವರ ಪುತ್ರ ಕನಕರಾಜು (23) ಮೃತ ದುರ್ದೈವಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 76 ಮಂದಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಅವರಲ್ಲಿ 30ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ನಗರದ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾದೆ ಯುವಕ ಮೃತಪಟ್ಟಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಕಲುಷಿತ ನೀರು ಸೇವನೆಯಿಂದ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಗ್ರಾಮದಲ್ಲಿ ಸಂಗ್ರಹಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಗ್ರಾಮಸ್ಥರ ಅಸ್ವಸ್ಥತೆಗೆ ಕಾರಣ ತಿಳಿದು ಬರಲಿದೆ ಎಂದು ಟಿಎಚ್‌ಒ ಡಾ.ಪುಟ್ಟ ತಾಯಮ್ಮ ತಿಳಿಸಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಪ್ರತಿ ಮನೆಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುವುದರೊಂದಿಗೆ ಗ್ರಾಮಸ್ಥರಿಗೆ ಧೈರ್ಯ ತುಂಬುವ ಕಾರ್ಯ ಮಾಡಬೇಕು. ಗ್ರಾಮದಲ್ಲಿ ಸ್ವಚ್ಛತೆ ಕಡೆ ಗಮನ ಹರಿಸಬೇಕು. ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಬೇಕು. ಅಲ್ಲಿವರೆಗೆ ಟ್ಯಾಂಕ್ ಮೂಲಕ ಕುಡಿಯುವ ನೀರನ್ನು ಪೂರೈಸಿ ಎಂದು ಸೂಚನೆ ನೀಡಿದರು.
ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಕನಕರಾಜು ಸಾವಿಗೆ ಸರಕಾರವೇ ನೇರ ಹೊಣೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿ ತಂಡ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದುಘಿ, ಮನೆ ಮನೆಗೂ ತೆರಳಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.












Click it and Unblock the Notifications