ಪ್ರಧಾನಿ ಹುದ್ದೆ ಮೇಲೆ ಆಮ್ ಆದ್ಮಿ ಪಕ್ಷದ ಕಣ್ಣು!
ನವದೆಹಲಿ, ಜ.4 : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ವಿಜಯ ಸಾಧಿಸಿ ಸರ್ಕಾರ ರಚಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂಬರುವ ಲೋಕಸಭಾ ಚನಾವಣೆ ಮೇಲೆ ಕಣ್ಣಿಟ್ಟಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ಸ್ಥಾನದಲ್ಲಿ ನೋಡುವುದು ನಮ್ಮ ಗುರಿಯಾಗಿದೆ ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.
ಶನಿವಾರ ನವದೆಹಲಿಯಲ್ಲಿ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಆಮ್ ಆದ್ಮಿ ಪಕ್ಷದ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಲೋಕಸಭೆ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. 15 ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. [ಕರ್ನಾಟಕದತ್ತ ಆಮ್ ಆದ್ಮಿ ಗಮನ]

ಮಾಧ್ಯಮಗಳೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ಯೋಗೇಂದ್ರ ಯಾದವ್, ದೇಶದಲ್ಲಿ ಪ್ರಧಾನಿ ಹುದ್ದೆ ಏರಲು ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಗಿಂತ ಉತ್ತಮ ಆಯ್ಕೆಗಳಿವೆ. ಮೋದಿ, ರಾಹುಲ್ ಅವರಿಗಂತ ಉತ್ತಮ ವ್ಯಕ್ತಿಯನ್ನು ಪ್ರಧಾನಿ ಸ್ಥಾನದಲ್ಲಿ ನಾವು ನೋಡಲು ಇಚ್ಛೆ ಪಡುತ್ತೇವೆ ಎಂದು ಹೇಳಿದರು. [ಮೋದಿಗೆ ಆಮ್ ಆದ್ಮಿ ಚಾಲೆಂಜ್ ]
ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ಸ್ಥಾನದಲ್ಲಿ ನೋಡಲು ನಾವು ಇಷ್ಟಪಡುತ್ತೇವೆ. ಆದರೆ, ಈ ಕುರಿತು ಘೋಷಣೆ ಮಾಡುವ ಸ್ಥಾನದಲ್ಲಿ ನಾವಿಲ್ಲ. ಈ ಕುರಿತು ಪಕ್ಷದ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುತ್ತೇವೆ. ಅದಕ್ಕಾಗಿ ಮೊದಲು ನಾವು ಎಲ್ಲಿದ್ದೇವೆ, ನಮ್ಮ ಶಕ್ತಿ ಏನೆಂದು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
23 ಸದಸ್ಯರ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ನಾವು ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸುತ್ತೇವೆ. ದೆಹಲಿ ಚುನಾವಣೆ ಮತ್ತು ಲೋಕಸಭೆ ಚುನಾವಣೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಆಮ್ ಆದ್ಮಿ ಪಕ್ಷ ಗುಜರಾತ್ ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ಹರ್ಯಾಣ, ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದರು. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಆಯಾ ರಾಜ್ಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.












Click it and Unblock the Notifications