ಸಿದ್ದರಾಮಯ್ಯ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು!
ನವದೆಹಲಿ, ನ. 19 : ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದು, ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ನೇಮಕ ಮಾಡಲು ಪಕ್ಷದ ಹೈ ಕಮಾಂಡ್ ನಾಯಕರು ಅಸ್ತು ಎಂದಿದ್ದಾರೆ. ಸಂಪುಟ ವಿಸ್ತರಣೆಯ ದಿನಾಂಕದ ಬಗ್ಗೆ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.
ನವದೆಹಲಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದರೆ, ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿ ಪಡಿಸುವ ಹೊಣೆಯನ್ನು ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. (ಸಭೆಯ ಮುಖ್ಯಾಂಶಗಳು)

4 ರಲ್ಲಿ 3 ಸ್ಥಾನ ತುಂಬಿ
ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎನ್ನುವುದಾದರೆ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳ ಪೈಕಿ ನಾಲ್ಕನ್ನು ಭರ್ತಿ ಮಾಡಿ, ಇಲ್ಲವೇ ಕನಿಷ್ಠ ಮೂವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಲಾಗಿದೆ. ಸಂಪುಟ ವಿಸ್ತರಣೆ ದಿನಾಂಕ ನಿಗದಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗದಿದೆ.

ಯಾರು ಸಂಪುಟ ಸೇರಬಹುದು?
ಸದ್ಯದ ಸುದ್ದಿಯಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಸಹೋದರನನ್ನು ಗೆಲ್ಲಿಸಿರುವ ಕನಕಪುರ ಶಾಸಕ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಮತ ಸೆಳೆಯುವ ಪ್ರಭಾವಿ ನಾಯಕ ಶಿವಾಜಿನಗರ ಶಾಸಕ ರೋಷನ್‌ಬೇಗ್ ಅವರು ಸಂಪುಟ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಇವರಲ್ಲದೆ, ಬಲಿಜ ಜನಾಂಗಕ್ಕೆ ಸೇರಿದ ಹಾನಗಲ್ ಶಾಸಕ ಮನೋಹರ ತಹಶೀಲ್ದಾರ ಅವರಿಗೂ ಸಚಿವ ಸ್ಥಾನದ ಭಾಗ್ಯ ಲಭಿಸುವ ಸಾಧ್ಯತೆಗಳಿವೆ.

ಪರಮೇಶ್ವರ್ ಗೆ ಸಚಿವ ಸ್ಥಾನ
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದ್ದರಿಂದ ಅವರ ಸಂಪುಟ ವಿಚಾರದ ಕುರಿತು ಯಾವುದೇ ನಿರ್ಣಯ ಕೈಗೊಂಡಿಲ್ಲ. ವ್ಯಕ್ತಿಗೊಂದು ಹುದ್ದೆ ನೀತಿ ಹಿನ್ನೆಲೆಯಲ್ಲಿ ಪರಮೇಶ್ವರ್ ಸಚಿವರಾದರೆ, ಕೆಪಿಸಿಸಿಗೆ ಹೊಸ ಸಾರಥಿ ಆಯ್ಕೆ ಮಾಡಬೇಕಾಗುತ್ತದೆ. ಆದ್ದರಿಂದ ಈ ನಿರ್ಧಾರ ಸೋನಿಯಾ ಗಾಂಧಿ ಅವರ ವಿವೇಚನೆಗೆ ಬಿಡಲಾಗಿದೆ.

ಪರಿಷತ್ ಗೆ ಸದಸ್ಯರ ನೇಮಕ
ಮುಮ್ತಾಜ್ ಅಲಿಖಾನ್ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಯಾರನ್ನು ನೇಮಕ ಮಾಡಿಕೊಳ್ಳಬೇಕು ಎಂಬ ನಿರ್ಧಾರವನ್ನು ಸೋನಿಯಾ ಗಾಂಧಿ ಅವರಿಗೆ ವಹಿಸಲಾಗಿದೆ. ಸೋನಿಯಾ ಒಪ್ಪಿಗೆ ನೀಡಿದರೆ ಇದೇ ಸ್ಥಾನಕ್ಕೆ ಪರಮೇಶ್ವರ್ ಅವರನ್ನು ನೇಮಕ ಮಾಡಿಕೊಂಡು ಸಚಿವ ಸ್ಥಾನ ನೀಡಲಾಗುತ್ತದೆ.

ಡಿಸೆಂಬರ್ ನಲ್ಲಿ ಅಭ್ಯರ್ಥಿಗಳ ಆಯ್ಕೆ
ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಡಿಸೆಂಬರ್ 2ನೇವಾರದಲ್ಲಿ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯ ಪಟ್ಟಿಯನ್ನು ಅಂತಿಮಗೊಳಿಸಲು ಹೈ ಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಎಐಸಿಸಿ ಅಧಿವೇಶನ
ಕರ್ನಾಟಕದಲ್ಲಿ ಈ ಬಾರಿ ಎಐಸಿಸಿ ಅಧಿವೇಶನ ನಡೆಸಲು ಅವಕಾಶ ನೀಡಬೇಕೆಂದು ಜಿ.ಪರಮೇಶ್ವರ್ ಸಭೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದರ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಚಿವರಿಗೆ ಮೌಲ್ಯಮಾಪನದ ಬಿಸಿ
ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನಡುವಿನ ಭಿನ್ನಮತಕ್ಕೆ ಕಾರಣವಾಗಿದ್ದ ಸಚಿವರ ಮೌಲ್ಯಮಾಪನಕ್ಕೆ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದಾರೆ. ಉಭಯ ನಾಯಕರು ಇದರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಮಂದಗತಿಯಲ್ಲಿ ಕೆಲಸ ಮಾಡುವ ಸಚಿವರಿಗೆ ಚುರುಕು ಮುಟ್ಟಿಸಿ ಎಂದು ಸಲಹೆ ನೀಡಿದ್ದಾರೆ.

ಸಂತೋಷ್ ಲಾಡ್ ಕುರಿತು ಚರ್ಚೆ ನಡೆದಿಲ್ಲ
ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ವಾರ್ತಾ ಮತ್ತು ಮೂಲಭೂತ ಸೌಕರ್ಯ ಸಚಿವ ಸಂತೋಷ್ ಲಾಡ್ ವಿಚಾರವಾಗಿ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications