ಅರವಿಂದ್ ಕೇಜ್ರಿವಾಲ್ ಬುಧವಾರದ ದಿನಚರಿ
ನವದೆಹಲಿ, ಫೆ. 11 : ದೆಹಲಿಯ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಿದ್ದಾರೆ. ದೆಹಲಿಯ ನಿಯೋಜಿತ ಸಿಎಂ ಕೇಜ್ರಿವಾಲ್ ಇಂದು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಬುಧವಾರ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ದೆಹಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ನೀಡಬೇಕೆಂದು ಕೇಜ್ರಿವಾಲ್ ಅವರು ರಾಜನಾಥ್ ಸಿಂಗ್ ಅವರ ಬಳಿ ಮನವಿ ಮಾಡಿದ್ದಾರೆ. [ದೆಹಲಿ ಮುಖಭಂಗಕ್ಕೆ ಮೋದಿ, ಅಮಿತ್ ಶಾ ಎಡವಟ್ಟೇ ಕಾರಣ?]
ಗುರುವಾರ ಬೆಳಗ್ಗೆ 10.30ಕ್ಕೆ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಫೆ.14ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಮೋದಿ ಅವರಿಗೆ ಕೇಜ್ರಿವಾಲ್ ಆಹ್ವಾನ ನೀಡುವ ಸಾಧ್ಯತೆ ಇದೆ. ಕೇಜ್ರಿವಾಲ್ ಇಂದಿನ ದಿನಚರಿ ನೋಡೋಣ ಬನ್ನಿ

ಸಚಿವ ವೆಂಕಯ್ಯ ನಾಯ್ಡು ಭೇಟಿ
ಅರವಿಂದ್ ಕೇಜ್ರಿವಾಲ್ ಬುಧವಾರ ಬೆಳಗ್ಗೆ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರನ್ನು ನಿರ್ಮಾಣ ಭವನದಲ್ಲಿ ಭೇಟಿ ಮಾಡಿದರು. ಈ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯ ಸಹ ಜೊತೆಗಿದ್ದರು.

ಗುರುವಾರ ಪ್ರಧಾನಿ ಮೋದಿ ಭೇಟಿ
ಗುರುವಾರ ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಜಯಗಳಿಸಿದ ಕೇಜ್ರಿವಾಲ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಧಾನಿ ಅಭಿನಂದನೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಖುದ್ದಾಗಿ ಭೇಟಿ ಮಾಡುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದರು.

ಸಚಿವ ರಾಜನಾಥ್ ಸಿಂಗ್ ಭೇಟಿ
ಬುಧವಾರ ಮಧ್ಯಾಹ್ನ ಅರವಿಂದ್ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದೆಹಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ನೀಡಬೇಕೆಂದು ಕೇಜ್ರಿವಾಲ್ ಅವರು ರಾಜನಾಥ್ ಸಿಂಗ್ ಅವರ ಬಳಿ ಮನವಿ ಮಾಡಿದ್ದಾರೆ.

ಝೆಡ್ ಪ್ಲಸ್ ಭದ್ರತೆ ಬೇಡ ಎಂದ ನಿಯೋಜಿತ ಸಿಎಂ
ದೆಹಲಿ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಅವರಿಗೆ ಝೆಡ್ ಪ್ಲಸ್ ಭದ್ರತೆ ಒದಗಿಸಲಾಗುವುದು ಎಂದು ಹೇಳಿದ್ದರು. ಆದರೆ, ಬುಧವಾರ ಅರವಿಂದ್ ಕೇಜ್ರಿವಾಲ್ ತಮಗೆ ಝೆಡ್ ಪ್ಲಸ್ ಭದ್ರತೆ ಬೇಡ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಮಾಣ ವಚನಕ್ಕೆ ಯಾರಿಗೆ ಆಹ್ವಾನ?
ಅರವಿಂದ್ ಕೇಜ್ರಿವಾಲ್ ಅವರ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ ಅವರಿಗೆ ಆಹ್ವಾನ ನೀಡಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.

ಸೋನಿಯಾ, ರಾಹುಲ್‌ಗೆ ಆಹ್ವಾನವಿಲ್ಲ
ಫೆ.14ರಂದು ನಡೆಯುವ ಅರವಿಂದ್ ಕೇಜ್ರಿವಾಲ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡುವುದಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications