ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ
ನವದೆಹಲಿ, ಫೆ.20 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಿಲಿತಾ ಅವರ ನಿರ್ಧಾರವನ್ನು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಪಶ್ನಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹಂತಕರ ಬಿಡುಗಡೆಗೆ ಗುರುವಾರ ತಡೆ ನೀಡಿ ಆದೇಶ ಹೊರಡಿಸಿದೆ.
ಗುರುವಾರ ಪ್ರಧಾನಿ ನಿವಾಸದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲು ನಿರ್ಧಾರ ಕೈಗೊಳ್ಳಲಾಗಿತ್ತು ಮತ್ತು ಈ ಕುರಿತು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಗುರುವಾರ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಏಳು ಜನ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತಡೆಯಾಜ್ಞೆ ನೀಡಿದೆ. ಈ ಕುರಿತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಅಪರಾಧಿಗಳನ್ನು ಬಿಡುಗಡೆ ಮಾಡಲು ಯಾವ ಮಾನದಂಡಗಳನ್ನು ತಗೆದುಕೊಂಡಿದೆ ಎಂದು ವಿವರಣೆ ಕೇಳಿದೆ. ಮುಂದಿನ ಆದೇಶದ ವರೆಗೆ ಬಿಡುಗಡೆ ಮಾಡಬಾರದು ಎಂದು ಸೂಚನೆ ಕೇಳಿದೆ.
ಫೆ.18ರಂದು ಸಚಿವ ಸಂಪುಟ ಸಭೆ ನಡೆಸಿದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಏಳು ಜನ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ಒಪ್ಪಿಗೆ ಪಡೆದಿದ್ದರು. ಈ ಕುರಿತು ನಿರ್ಧಾರ ಕೈಗೊಳ್ಳಲು ಅವಕಾಶ ನೀಡಬೇಕೆಂದು ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧಾರ ಕೈಗೊಳ್ಳಲಾಗಿತ್ತು. [ರಾಜೀವ್ ಹಂತಕರಿಗೆ ಬಿಡುಗಡೆ ಭಾಗ್ಯ]
ಪ್ರಧಾನಿ ಮನಮೋಹನ್ ಸಿಂಗ್, ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವುದು ಕಾನೂನು ಬಾಹಿರ. ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು. ಉಗ್ರರ ಬಗ್ಗೆ ಮೃದು ಧೋರಣೆ ಬೇಡ ಎಂದು ತಮಿಳುನಾಡು ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.[ರಾಜೀವ್ ಹಂತಕರಿಗೆ ಜೀವಾವಧಿ ಶಿಕ್ಷೆ]
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ನನ್ನ ತಂದೆ ದೇಶಕ್ಕಾಗಿ ಹುತಾತ್ಮರದರು. ಒಬ್ಬ ಮಾಜಿ ಪ್ರಧಾನಿಯ ಹಂತಕರನ್ನೇ ಬಿಡುಗಡೆ ಮಾಡಲಾಗುತ್ತಿದೆ ಎಂದಾದರೆ ಜನಸಾಮಾನ್ಯರು ನ್ಯಾಯ ನಿರೀಕ್ಷೆ ಮಾಡುವುದು ಹೇಗೆ ಎಂದು ಜಯಲಲಿತಾ ಅವರ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.


Click it and Unblock the Notifications
