BREAKING: ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ!
ನವ ದೆಹಲಿ, ಜು. 16: ಮಹತ್ವದ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿತ್ತು.
ದೆಹಲಿಯಲ್ಲಿ ಪ್ರಧಾನಿ ಭೇಟಿ ಮಾಡಿರುವ ಯಡಿಯೂರಪ್ಪ ಅವರು, ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಜೊತೆಗಿದ್ದರು ಎಂದು ಕರ್ನಾಟಕದ ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ.
ಪ್ರಧಾನಿ ಮೋದಿ ಭೇಟಿ ಬಳಿಕ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಯಡಿಯೂರಪ್ಪ ಅವರು, "ರಾಜ್ಯದ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದೇನೆ. ಪ್ರಧಾನಿ ಮೋದಿ ಅವರು ನಮ್ಮ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. ನಾಳೆ ಶನಿವಾರ ಇನ್ನೂ ಹಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದೇನೆ" ಎಂದರು. ಇನ್ನು ಕರ್ನಾಟಕ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, "ಆ ಬಗ್ಗೆ ನನಗೇನು ಗೊತ್ತಿಲ್ಲ, ನೀವೆ ಹೇಳಿ" ಎಂದು ನಗುತ್ತಲೇ ಉತ್ತರಿಸಿದರು.












Click it and Unblock the Notifications