Breaking; ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಕೋವಿಡ್ ಸೋಂಕು
ನವದೆಹಲಿ, ಜನವರಿ 04; ನವದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಕೋವಿಡ್ ಸೋಂಕು ತಗುಲಿದೆ. ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಮಂಗಳವಾರ ಟ್ವೀಟ್ ಮೂಲಕ ಕೋವಿಡ್ ಸೋಂಕು ತಗುಲಿರುವ ಕುರಿತು ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಐಸೋಲೇಷನ್ ಆಗಿ ಎಂದು ಮನವಿ ಮಾಡಿದ್ದಾರೆ.
ಕೋವಿಡ್ ಸೋಂಕು ತಗುಲಿರುವ ಅರವಿಂದ ಕೇಜ್ರಿವಾಲ್‌ಗೆ ರೋಗದ ಸಾಮಾನ್ಯ ಲಕ್ಷಣಗಳಿವೆ. ಆದ್ದರಿಂದ ಸಂಪರ್ಕಕ್ಕೆ ಬಂದವರು ಐಸೋಲೇಷನ್ ಆಗುವಂತೆ ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸೋಮವಾರ ರಾಜ್ಯದಲ್ಲಿ 4099 ಹೊಸ ಪ್ರಕರಣಗಳು ದಾಖಲಾಗಿದ್ದವು.
ನವದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ 6.46 ಆಗಿದೆ. 6,288 ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ರಾಜ್ಯದಲ್ಲಿ 5,500 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.
ವೀಕೆಂಡ್ ಕರ್ಫ್ಯೂ ಜಾರಿ; ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಶನಿವಾರ ಮತ್ತು ಭಾನುವಾರ ತುರ್ತು ಕಾರ್ಯಗಳಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಮನವಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಚಾರ ನಡೆಸುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ದೆಹಲಿಯಲ್ಲಿ ಹೊಸ ಕೋವಿಡ್ ಪ್ರಕರಣ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಂಗಳವಾರ ತುರ್ತು ಸಭೆ ನಡೆಸಿದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ವೀಕೆಂಡ್ ಕರ್ಫ್ಯೂ ಜಾರಿಗೊಳಿಸುವ ತೀರ್ಮಾನ ಕೈಗೊಂಡಿತು.
ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, "ಕಳೆದ 8-10 ದಿನದಲ್ಲಿ ರಾಜ್ಯದಲ್ಲಿ 11,000 ಕೋವಿಡ್ ಪ್ರಕರಣ ದಾಖಲಾಗಿದೆ. ಇವುಗಳಲ್ಲಿ 350 ಜನರು ಆಸ್ಪತ್ರೆಯಲ್ಲಿದ್ದಾರೆ. 124 ಜನರು ಆಕ್ಸಿಜನ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದರು.












Click it and Unblock the Notifications