ಫೆ.28ರಂದು ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಕೇಜ್ರಿವಾಲ್ ಭಾಷಣ
ಲಕ್ನೋ, ಫೆಬ್ರವರಿ.15: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ನವದೆಹಲಿ ಮುಖ್ಯಮಂತ್ರಿ ಅರವಿದ್ ಕೇಜ್ರಿವಾಲ್ ಸಹ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ಫೆಬ್ರವರಿ.28ರಂದು ಕಿಸಾನ್ ಮಹಾ ಪಂಚಾಯತ್ ನಡೆಸಲಾಗುತ್ತದೆ. ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ರೈರ ಪ್ರತಿಭಟನೆಗೆ ಆಪ್ ಆದ್ಮಿ ಪಕ್ಷವು ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದೆ.
ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ನವದೆಹಲಿಯ ಸಿಂಘು ಗಡಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎರಡು ಬಾರಿ ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸಿದ್ದರು. ಈ ಹಿಂದೆ ಕೂಡಾ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

ದೆಹಲಿಯ ಮೂರು ಗಡಿಯಲ್ಲಿ ರೈತರ ಹೋರಾಟ:
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 82 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಸಾನ್ ಮಹಾ ಪಂಚಾಯತ್ ಸಭೆಗಳನ್ನು ನಡೆಸಲಾಗುತ್ತಿದೆ.












Click it and Unblock the Notifications