ಬಿಜೆಪಿ ಎದುರು ಪ್ರಿಯಾಂಕಾ, ರಾಹುಲ್ ಪ್ರಚಾರವನ್ನೇ ಮಾಡುತ್ತಿಲ್ಲ: ಕೇಜ್ರಿವಾಲ್ ಆರೋಪ
ನವದೆಹಲಿ, ಮೇ 8: ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಮಯ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.
ಅಲ್ಲದೆ, ಪ್ರಿಯಾಂಕಾ ಗಾಂಧಿ ಮತ್ತು ಅವರ ಸಹೋದರ ರಾಹುಲ್ ಗಾಂಧಿ ಅವರು ಬಿಜೆಪಿಯೊಂದಿಗೆ ಕಾಂಗ್ರೆಸ್ ನೇರ ಹಣಾಹಣಿ ನಡೆಸುತ್ತಿರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸದೆ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಆಮ್ ಆದ್ಮಿ ಪಕ್ಷದ ಮೈತ್ರಿ ಮಾತುಕತೆ ಮುರಿದುಬಿದ್ದ ಬಳಿಕ ಅದರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್, ಬುಧವಾರ ಕೂಡ ಪಕ್ಷದ ವಿರುದ್ಧ ಹರಿಹಾಯ್ದರು.
'ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಮಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಅವರು ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಏಕೆ ಪ್ರಚಾರ ಮಾಡಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಸಮಾಜವಾದಿ-ಬಹುಜನ ಸಮಾಜ ಪಕ್ಷಗಳ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಎಎಪಿ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಅಣ್ಣ-ತಂಗಿ ಇಬ್ಬರೂ ಬಿಜೆಪಿಯೊಂದಿಗೆ ನೇರ ಪೈಪೋಟಿ ಇರುವ ಕ್ಷೇತ್ರಗಳಿಗೆ ಪ್ರಚಾರಕ್ಕಾಗಿ ಹೋಗುತ್ತಲೇ ಇಲ್ಲ' ಎಂದು ಕಿಡಿಕಾರಿದರು.












Click it and Unblock the Notifications