ಕಳಂಕಿತರಿಗೆ ಟಿಕೆಟ್ ನೀಡೋಲ್ಲ ಸಿಎಂ ಘೋಷಣೆ
ನವದೆಹಲಿ, ಡಿ. 17 : ನವದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೋಮವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ಚುನಾವಣಾ ಸಮನ್ವಯ ಸಮಿತಿಯ ಸದಸ್ಯ ಮಧಸೂದನ್ ಮಿಸ್ತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಕೆಪಿಸಿಸಿಯಿಂದ ಕಳುಹಿಸಿರುವ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಯ ಮಾನದಂಡಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಅಪರಾಧಿ ಹಿನ್ನೆಲೆ ಇರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. [ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]

ಸಭೆಯ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಭ್ಯರ್ಥಿಗಳ ಆಯ್ಕೆ ಮಾನದಂಡಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕಳಂಕಿತರಿಗೆ ಟಿಕೆಟ್ ನೀಡಬಾರದು ಎಂದು ನಾವು ನಿರ್ಧರಿಸಿದ್ದೆವು. ರಾಷ್ಟ್ರೀಯ ನಾಯಕರು ಅದನ್ನೇ ಹೇಳಿದ್ದಾರೆ ಎಂದರು.
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷ ನಿಷ್ಠೆ, ಪಕ್ಷದ ಕೆಲಸ, ಗೆಲ್ಲುವ ಸಾಮರ್ಥ್ಯಗಳನ್ನು ಮಾನದಂಡವನ್ನಾಗಿ ಪರಿಗಣಿಸುತ್ತೇವೆ. ಗೆಲ್ಲುವ ಸಾಮರ್ಥ್ಯವೇ ಅಭ್ಯರ್ಥಿಯ ಆಯ್ಕೆಯ ಅಂತಿಮ ಮಾನದಂಡ ಎಂದು ನಿರ್ಧರಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಇನ್ನೊಂದು ಸುತ್ತಿನ ಮಾತುಕತೆ ನಂತರ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಜ.2ಕ್ಕೆ ಸಭೆ : ಯಾವ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಸಭೆ ನಡೆಸಿದ ಬಳಿಕ ಮತ್ತೊಮ್ಮೆ ಜ.2ರಂದು ಸಮನ್ವಯ ಸಮಿತಿಯ ಸಭೆ ನಡೆಸಲು ನಿರ್ಧರಿಸಲಾಗಿದೆ. ನಂತರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮವಾಗಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ಬೆಂಗಳೂರು ದಕ್ವಿಣ ಕ್ಷೇತ್ರದ ಅಭ್ಯರ್ಥಿಯಾಗಿ ನಂದನ್ ನಿಲೇಕಣಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಯಾವ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ನಂದಲ್ ನಿಲೇಕಣಿ ಸ್ಪರ್ಧೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸ್ಟಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ಪ್ರಚಾರ ಪ್ರಕ್ರಿಯೆಗಳು ಆರಂಭವಾಗಿಲ್ಲ, ಜಿಲ್ಲಾ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸುವುದರ ಮೂಲಕ ಅಧಿಕೃತವಾಗಿ ಪ್ರಚಾರ ಆರಂಭಿಸುತ್ತೇವೆ ಎಂದರು. ರಾಜ್ಯದಲ್ಲಿನ ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಮಾತ್ರ ಚರ್ಚಿಸಲಾಗಿದೆ. ಅಭ್ಯರ್ಥಿಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.












Click it and Unblock the Notifications