ಎಐಸಿಸಿ ಅಧ್ಯಕ್ಷೀಯ ಚುನಾವಣೆ: ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
ನವದೆಹಲಿ, ಡಿಸೆಂಬರ್ 4 : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು (ಡಿಸೆಂಬರ್ 04) ನಾಮಪತ್ರ ಸಲ್ಲಿಸಿದರು.
ನವದೆಹಲಿಯ ರಾಜ್ ಘಾಟ್ ನಲ್ಲಿರುವ ಶಿವನ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಎಐಸಿಸಿ ಕೇಂದ್ರ ಕಚೇರಿಗೆ ತೆರಳಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ನಾಮಪತ್ರಕ್ಕೆ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ 6 ಮುಖ್ಯಮಂತ್ರಿಗಳು ಸೂಚಕರಾಗಿ ಸಹಿ ಮಾಡಿದರು. ಈ ವೇಳೆ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಧ್ಯಕ್ಕೆ ರಾಹುಲ್ ಗಾಂಧಿ ಅವರು ಒಬ್ಬರೇ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟವಾದ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಇಂದು ಮದ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದ್ದು, ಅಷ್ಟರೊಳಗೆ ಒಂದು ವೇಳೆ ರಾಹುಲ್ ಗಾಂಧಿ ವಿರುದ್ದ ಯಾರಾದರೂ ನಾಮಪತ್ರ ಸಲ್ಲಿಸಿದರೆ ಡಿಸೆಂಬರ್ 16ರಂದು ಮತದಾನ ನಡೆಯಲಿದ್ದು, 18ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ನವೆಂಬರ್ 20ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಇದರಿಂದ ಬಹುತೇಕ ರಾಹುಲ್ ಅವರೇ ಎಐಸಿಸಿ ಅಧ್ಯಕ್ಷರಾಗುವುದು ಖಚಿತವಾಗಿದೆ.












Click it and Unblock the Notifications