ಬಿಬಿಎಂಪಿ ಚುನಾವಣೆ: ತ್ವರಿತ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ, ಫೆಬ್ರವರಿ 18: ಬಿಬಿಎಂಪಿ ಚುನಾವಣೆ ಕುರಿತು ತ್ವರಿತ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಅವಧಿ ಮುಗಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ತುರ್ತು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
2020 ಸೆಪ್ಟೆಂಬರ್ ನಲ್ಲಿಯೇ ಬಿಬಿಎಂಪಿ ಅವಧಿ ಮುಗಿದ್ದರೂ ಚುನಾವಣೆ ಇನ್ನೂ ನಡೆದಿಲ್ಲ ಎಂದು ಕೆಲ ಅರ್ಜಿದಾರರ ಪರ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು. ದೇಶದಲ್ಲಿ ಸಾಕಷ್ಟು ಚುನಾವಣೆಗಳು ನಡೆಯುತ್ತಿದ್ದರೂ ಅಪೆಕ್ಸ್ ಕೋರ್ಟ್ ಆದೇಶದಿಂದಾಗಿ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ಹೇಳಿದರು.

ಈ ಹಿಂದೆ ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಕರ್ನಾಟಕ ಸರ್ಕಾರ ಕೋರಿತ್ತು.
ಬಿಬಿಎಂಪಿ ಅವಧಿ 2020ರಲ್ಲಿಯೇ ಮುಗಿದಿದ್ದು, ಚುನಾವಣಾ ಪ್ರಕ್ರಿಯೆಗೆ ನಿವೃತ್ತ ಸಿಜೆಐ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯ ಪೀಠ ತಡೆ ನೀಡಿದ್ದರಿಂದ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಲಾಗಿತ್ತು.
ಆರು ವಾರಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕಳೆದ ವರ್ಷದ ಡಿಸೆಂಬರ್ 4 ರಂದು ಹೈಕೋರ್ಟ್ ಆದೇಶ ನೀಡಿತ್ತು ಆದರೆ, ಹೈಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿಯೇ ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಮುಗಿದಿರುವುದರಿಂದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ.
ವಿವಾದ ಅವಧಿ ಮುಗಿದಿರುವ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ್ದಾಗಿದೆ ಎಂದು ಅರೋರಾ ಹೇಳಿದಾಗ, ಅರ್ಜಿಯನ್ನು ಪರಿಗಣಿಸುವುದಾಗಿ ನ್ಯಾಯಪೀಠ ಹೇಳಿತು.
ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವುದು ನಿಶ್ಚಿತವಾಗಿದೆ.
ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟುಸತ್ಯವೋ, ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಬಾವುಟ ರಾರಾಜಿಸುವುದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
ಮುಖ್ಯಮಂತ್ರಿಯಾಗಿ ಆರು ತಿಂಗಳ ಪೂರ್ಣಗೊಳಿಸಿದ ಹಿನ್ನೆಲೆ ಮತ್ತು ಹುಟ್ಟುಹಬ್ಬದ ಪ್ರಯುಕ್ತ ಜ. 28 ರಂದು ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು ಸಮಗ್ರ ಅಭಿವೃದ್ಧಿಯನ್ನು ಗಮನಿಸಿ ಬೆಂಗಳೂರಿನ ಜನರು ನಮ್ಮನ್ನು ಬೆಂಬಲಿಸಲಿದ್ದಾರೆ.
ಇದರಲ್ಲಿ ಯಾವುದೇ ಅನುಮಾನ ಇಲ್ಲ. ಸರ್ಕಾರ ಮಾಡಿರುವ ಜನೋಪಯೋಗಿ ಕೆಲಸಗಳ ಬಗ್ಗೆ ಜನರಿಗೆ ತಿಳಿಹೇಳಬೇಕು. ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದ್ದು, ಆತ್ಮವಿಶ್ವಾಸದಿಂದ ಬೆಂಗಳೂರಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ಕರೆ ನೀಡಿದ್ದರು.












Click it and Unblock the Notifications