ಕಾಂಗ್ರೆಸ್ ಏಕಾಂಗಿಯಾಗಿ ಗೋವಾದಲ್ಲಿ ಗೆಲ್ಲಲು ಸಾಧ್ಯವಿಲ್ಲ; ಶಿವಸೇನೆ
ಪಣಜಿ, ಜನವರಿ 13; ಮಹಾರಾಷ್ಟ್ರದ ಬಳಿಕ ಗೋವಾದಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆ ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂದು ಅಂದಾಜಿಸಲಾಗಿತ್ತು. ಗೋವಾದ 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಿಗದಿಯಾಗಿದೆ.
ಕಾಂಗ್ರೆಸ್ ಮತ್ತು ಶಿವಸೇನೆ ಗೋವಾದಲ್ಲಿ ಒಟ್ಟಾಗಿ ಸಾಗಲು ಮೊದಲ ಹೆಜ್ಜೆಯಲ್ಲಿಯೇ ಅಡ್ಡಿ ಉಂಟಾಗಿದೆ. ಶಿವಸೇನೆ ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಸಾಲು ಸಾಲು ನಾಯಕರು ಪಕ್ಷ ಬಿಡುತ್ತಿದ್ದು, ಗೋವಾ ಕಾಂಗ್ರೆಸ್‌ಗೆ ಹೊಸ ಸವಾಲು ಎದುರಾಗಿದೆ.
ಶಿವಸೇನೆ ನಾಯಕ ಸಂಜಯ್ ರಾವತ್ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ್ದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು, "ಗೋವಾದ ರಾಜಕೀಯ ಪರಿಸ್ಥಿತಿ ಹೇಗಿದೆ ಎಂದರೆ ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆ ಎದುರಿಸಿದರೆ ಶಾಸಕರ ಸಂಖ್ಯೆ ಒಂದಂಕಿ ದಾಟುವುದಿಲ್ಲ" ಎಂದು ಭವಿಷ್ಯ ನುಡಿದರು.

"ಗೋವಾ ಕಾಂಗ್ರೆಸ್‌ನಲ್ಲಿ ಮೂವರು ಶಾಸಕರು ಉಳಿಸಿದ್ದಾರೆ. ಪಕ್ಷ ಈಗಾಗಲೇ ಮುಖಭಂಗ ಅನುಭವಿಸಿದೆ. ಕಷ್ಟದ ಪರಿಸ್ಥಿತಿಯಲ್ಲಿ ನಾವು ಮತ್ತು ಎನ್‌ಸಿಪಿ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಭರವಸೆ ನೀಡಿದ್ದೇವೆ. ಆದರೆ ಕಾಂಗ್ರೆಸ್ ಏನು ಚಿಂತನೆ ನಡೆಸುತ್ತಿದೆ? ತಿಳಿದಿಲ್ಲ" ಎಂದು ಸಂಜಯ್ ರಾವತ್ ಹೇಳಿದರು.
" 40 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 30ರಲ್ಲಿ ಕಣಕ್ಕಿಳಿಯಲಿ. ಉಳಿದ ಕ್ಷೇತ್ರಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲಿ ಎಂಬ ಆಯ್ಕೆಯನ್ನು ಅವರಿಗೆ ನೀಡಲಾಗಿದೆ. ಒಂದು ವೇಳೆ ಏಕಾಂಗಿಯಾಗಿ ಪಕ್ಷ ಚುನಾವಣೆ ಎದುರಿಸಿದರೆ ಒಂದಂಕಿ ಶಾಸಕರು ಆಯ್ಕೆಯಾಗಲಿದ್ದಾರೆ" ಎಂದು ಸಂಜಯ್ ರಾವತ್ ತಿಳಿಸಿದರು.
ಸಂಜಯ್ ರಾವತ್ ಗೋವಾ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್, ಸಿಎಲ್‌ಪಿ ನಾಯಕ ದಿಗಂಬರ್ ಕಾಮತ್, ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡನ್ಕರ್ ಜೊತೆ ಸಭೆ ನಡೆಸಿದ್ದಾರೆ. ಕಾಂಗ್ರೆಸ್, ಶಿವಸೇನೆ, ಎನ್‌ಸಿಪಿ, ಗೋವಾ ಫಾರ್ವರ್ಡ್ ಪಕ್ಷದ ಮೈತ್ರಿಕೂಟ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಕಳೆದ 50 ವರ್ಷಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸದ 10 ವಿಧಾನಸಭಾ ಕ್ಷೇತ್ರಗಳನ್ನು ಮೈತ್ರಿಕೂಟಕ್ಕೆ ಬಿಟ್ಟುಕೊಡಬೇಕು ಎಂಬ ಆಯ್ಕೆಯನ್ನು ಸಂಜಯ್ ರಾವತ್ ಮುಂದಿಟ್ಟಿದ್ದಾರೆ. ಅಲ್ಲದೇ ಈ ಮೈತ್ರಿಕೂಟ ರಾಜ್ಯ ರಾಜಕೀಯದಲ್ಲಿ ಹೊಸ ದೃಷ್ಟಿಕೋನಕ್ಕೆ ಸಾಕ್ಷಿಯಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿವರಣೆ ನೀಡಿದ್ದಾರೆ.
"ಶಿವಸೇನೆ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಮುಖ್ಯಮಂತ್ರಿ ಅಭ್ಯರ್ಥಿ ಆಗುವುದಾದರೆ ಬೆಂಬಲ ನೀಡಲಿದೆ. ಈ ಕುರಿತು ಉತ್ಪಲ್ ಪರಿಕ್ಕರ್ ಅಂತಿಮ ತೀರ್ಮಾನ ಕೈಗೊಳ್ಳಬೇಕು" ಎಂದು ಸಂಜಯ್ ರಾವತ್ ಹೇಳಿದ್ದಾರೆ.
"ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಉತ್ಪಲ್ ಪರಿಕ್ಕರ್ ಸೂಕ್ತ ಮತ್ತು ದೃಢ ನಿರ್ಧಾರ ಕೈಗೊಳ್ಳಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ಶಿವಸೇನೆ ಬೆಂಬಲ ನೀಡಲಿದೆ" ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ.
ಉತ್ಪಲ್ ಪರಿಕ್ಕರ್ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಸಹ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
2017ರ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆದ್ದು ಗೋವಾದಲ್ಲಿ ಬಹದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನಗಳಲ್ಲಿ ಗೆದ್ದ ಬಿಜೆಪಿ ಇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು.
ಈ ಬಾರಿಯ ಚುನಾವಣೆ ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಶಾಸಕರು ಪಕ್ಷವನ್ನು ಬಿಟ್ಟಿದ್ದಾರೆ. ಎಎಪಿ ಮತ್ತು ಟಿಎಂಸಿ ಸಹ ಈ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.
ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ, ಕಾಂಗ್ರೆಸ್ 3ನೇ ಸ್ಥಾನಕ್ಕೆ ಕುಸಿಯಲಿವೆ ಎಂದು ಹೇಳಿದೆ. ಎಎಪಿ ಪಕ್ಷ ಪ್ರತಿಪಕ್ಷ ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.












Click it and Unblock the Notifications