ಅನಿರ್ದಿಷ್ಟಾವಧಿ ಉಪವಾಸ ಕೈಬಿಟ್ಟ ಎಫ್ ಟಿಐಐ ವಿದ್ಯಾರ್ಥಿಗಳು
ಪುಣೆ, ಸೆಪ್ಟೆಂಬರ್,28 : ಫಿಲ್ಮ್ ಆಂಡ್ ಟೆಲಿವಿಷನ್ ಆಫ್ ಇಂಡಿಯಾ(ಎಫ್ ಟಿಐಐ) ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸದ್ಯಕ್ಕೆ ಕೈಬಿಟ್ಟಿದ್ದಾರೆ. ಭಾನುವಾರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವರಿಂದ ಪತ್ರ ಬಂದ ಬಳಿಕ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
'ಫಿಲ್ಮ್ ಡಿವಿಷನ್ ನ ಜಂಟಿ ಕಾರ್ಯದರ್ಶಿಯಾದ ಕೆ. ಸಂಜಯ್ ಮೂರ್ತಿ, ಎಫ್ ಟಿಐಐನ 5 ವಿದ್ಯಾರ್ಥಿಗಳೊಂದಿಗೆ ಮುಂಬೈನ ಫಿಲ್ಮ್ ಡಿವಿಷನ್ ಕಚೇರಿಯಲ್ಲಿ ಸೆಪ್ಟೆಂಬರ್ 29ರಂದು ಮಾತುಕತೆ ನಡೆಸಲಿದ್ದಾರೆ. ಅಧಿಕಾರಿಗಳು ನಮ್ಮ ಬೇಡಿಕೆಯನ್ನು ಈಡೇರಿಸಬಹುದೆಂಬ ಭರವಸೆ ಇಟ್ಟುಕೊಂಡಿದ್ದೇವೆ. ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ಮುಂದುವರೆಸುವ ಸಾಧ್ಯತೆ ಇದೆ' ಎಂದು ಎಫ್ ಟಿಐಐ ವಿದ್ಯಾರ್ಥಿಗಳು ತಿಳಿಸಿದ್ದಾರೆ.[ಪುಣೆಯಲ್ಲಿ ರಾಹುಲ್ ಗಾಂಧಿ ಜತೆ ಕಾಣಿಸಿಕೊಂಡ ರಮ್ಯಾ!]
ಎಫ್ ಟಿಐಐ ನಿರ್ದೇಶಕ ಗಜೇಂದ್ರ ಚೌಹಾಣ್ ರನ್ನು ಹುದ್ದೆಯಿಂದ ಕೈಬಿಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದ ಎಫ್ ಟಿಐಐ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದರು.
ಎಫ್ ಟಿಐಐ ವಿದ್ಯಾರ್ಥಿಗಳು ಸುಮಾರು 108 ದಿನಗಳಿಂದ ಬೃಹತ್ ಪ್ರತಿಭಟನೆ ಹಾಗೂ 18 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಸ್ಯೆಯನ್ನು ಆದಷ್ಟು ಶೀಘ್ರದಲ್ಲೇ ನಿವಾರಿಸುವುದಾಗಿ ಭರವಸೆ ನೀಡಿದ್ದರು.
ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !