ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ವಿದ್ಯಾರ್ಥಿಗಳು
ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳು ಬ್ಯಾನರ್ ಹಿಡಿಯುತ್ತಾರೆ. ಆದರೆ, ರಾಯಚೂರು ಕೃಷಿ ಇಂಜಿನಿಯರಿಂಗ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ರಾಯಚೂರು, ಫೆಬ್ರವರಿ. 07: ರಾಜ್ಯದಲ್ಲಿ ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ರಾಯಚೂರಿನ ಕೃಷಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಳೆದ 23 ದಿನಗಳಿಂದ ಅಹೋರಾತ್ರಿ ನಿರಂತರ ಧರಣಿ ಮಾಡುತ್ತಿದ್ದರೂ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ತಮ್ಮ ಕೈಯಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲ್‌ಗೆ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದಾರೆ. ಪತ್ರವನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರದ ಮುಂದೆ ಎರಡು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ.
1) ಕರ್ನಾಟಕ ರಾಜ್ಯದಲ್ಲಿ ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪಿಸಬೇಕು.
2) ಕರ್ನಾಟಕ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಶೇ. 15 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಬಿ.ಟೆಕ್ (ಕೃಷಿ ತಾಂತ್ರಿಕ) ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.
ತರಗತಿಗಳನ್ನು ಬಹಿಷ್ಕರಿಸಿ ಕಳೆದ 23 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ತಮ್ಮ ಹೋರಾಟಕ್ಕೆ ಸ್ಥಳೀಯ ಶಾಸಕರಾಗಲಿ, ಅಧಿಕಾರಿಗಳಾಗಲಿ ಸ್ಪಂದನೆ ನಿಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ನಾಲ್ಕು ವರ್ಷದ ಕೃಷಿ ಬಿ.ಟೆಕ್ ( ತಾಂತ್ರಿಕ) ಪದವಿ ಮುಗಿದ ವಿದ್ಯಾರ್ಥಿಗಳು ಸರ್ಕಾರದ ಕೃಷಿ ಇಲಾಖೆ ಅಡಿಯಲ್ಲಿ ಇರುವ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇಷ್ಟು ದಿನ ನೇಮಕಾತಿಯಲ್ಲಿ ಇದ್ದ ಶೇ. 15ರಷ್ಟು ಮಿಸಲಾತಿಯನ್ನು ಈಗ ಬೇರೆ ವಿಭಾಗದ ಬಿ.ಟೆಕ್ ಪದವೀಧರಿಗೂ ವಿಸ್ತರಿಸಲಾಗಿದ್ದು, ಇದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಇರುವ ಹಾಗೆಯೇ ನಮ್ಮ ರಾಜ್ಯದಲ್ಲಿಯೂ ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈಗ ರಕ್ತದಲ್ಲಿ ಪತ್ರ ಬರೆದಿರುವ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಇನ್ನು ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಕಾಂಗ್ರೆಸ್ ಕೂಡ ಸರ್ಕಾರಕ್ಕೆ ಚಾಟಿ ಬೀಸಿದೆ. "ರಾಯಚೂರು ಕೃಷಿ ವಿವಿಯ ವಿದ್ಯಾರ್ಥಿಗಳು ಕೃಷಿ ತಾಂತ್ರಿಕ ಪಧವಿದರರಿಗೆ ಕೃಷಿ ಇಲಾಖೆಯ ನೇಮಕಾತಿಯಲ್ಲಿ ಆದ್ಯತೆ ನೀಡಬೇಕೆಂದು ಕಳೆದ 22 ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟಿಸುತ್ತಿದ್ದಾರೆ. ಸರ್ಕಾರ ಅವರತ್ತ ತಿರುಗಿಯೂ ನೋಡಲಿಲ್ಲ. ಈಗ ಸಿಎಂಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ, ಈಗಲಾದರೂ ಅವರ ಬೇಡಿಕೆಯನ್ನು ಆಲಿಸುವಿರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ..?" ಎಂದು ಟ್ವೀಟ್ ಮಾಡಿದೆ.












Click it and Unblock the Notifications