ಮುಖ್ಯ ಮಂತ್ರಿಯಾಗಿ ಒಂದು ವರ್ಷದ ಬಳಿಕ ರಾಯಚೂರಿಗೆ ಬಸವರಾಜ ಬೊಮ್ಮಾಯಿ ಭೇಟಿ
ರಾಯಚೂರು, ಆಗಸ್ಟ್, 23: ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಒಂದು ವರ್ಷ ಕಳೆದರೂ ರಾಯಚೂರು ಜಿಲ್ಲೆಗೆ ಭೇಟಿ ನೀಡಿರಲಿಲ್ಲ. ಆಗಸ್ಟ್ 27ರಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಉತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಮಿಸುತ್ತಿದ್ದಾರೆ. ಇವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ರಾಯಚೂರಿಗೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ನಗರ ವಿಧಾನಸಭಾ ಕ್ಷೇತ್ರದಲ್ಲಿರುವ ವಿಮಾನ ನಿಲ್ದಾಣ ಅಡಿಗಲ್ಲು ಸಮಾರಂಭಗಳನ್ನು ಏರ್ಪಡಿಸಲಾಗಿದೆ. ಅಲ್ಲದೇ ಇತರೆ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಮತ್ತು ಕಾರ್ಯಕ್ರಮಗಳನ್ನು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮ ನಿಗದಿ ಪೂರ್ವ ರಾಜ್ಯದಲ್ಲಿ ತಲೆದೂರಿದ ಎರಡು ಪ್ರಮುಖ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯಿತು ಎನ್ನುವ ಮಾಹಿತಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ರಾಯಚೂರು ಗಡಿ ಜಿಲ್ಲೆ ಆದ್ದರಿಂದ ತೆಲಂಗಾಣ ಸೇರ್ಪಡೆ ಹೇಳಿಕೆಯ ವಿವಾದಕ್ಕೆ ಸಂಬಂಧಿಸಿ ಗೊಂದಲಗಳು ಉಂಟಾಗುವ ಸಾಧ್ಯತೆಗಳು ಇವೆ.
ಆಗಸ್ಟ್ 27ಕ್ಕೆ ರಾಯಚೂರಿಗೆ ಸಿಎಂ ಭೇಟಿ
ಕೊಡಗು ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆಲ ಜಿಲ್ಲೆಗಳ ಪ್ರವಾಸ ರದ್ದು ಮಾಡಿದ್ದಾರೆಯೇ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಸೃಷ್ಟಿ ಆಗಿವೆ. ಮುಖ್ಯಮಂತ್ರಿಗಳು ರಾಯಚೂರು ಜಿಲ್ಲೆಯ ಪ್ರವಾಸದ ಬಗ್ಗೆಯೂ ಭಾರೀ ಮೀನಾಮೇಷ ಚರ್ಚೆಗೆ ಕಾರಣವಾಗಿದೆ. ಆದರೆ ಕೃಷಿ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಉತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಸ್ಟ್ 27ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ವಿವಿಧ ಕಾರ್ಯಕ್ರಗಳಿಗೆ ಚಾಲನೆ ನೀಡಲಿರೋ ಸಿಎಂ
ಆಗಸ್ಟ್, 27ರಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಯಚೂರಿಗೆ ಆಗಮಿಸಲಿದ್ದಾರೆ. ಅವರು ವಿಮಾನ ನಿಲ್ದಾಣದ ಅಡಿಗಲ್ಲು ಸಮಾರಂಭದೊಂದಿಗೆ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಭೇಟಿ ಹಿನ್ನೆಲೆ ಜಿಲ್ಲೆಯಲ್ಲಿ ಭಾರೀ ಸಿದ್ಧತೆ ನಡೆದಿದೆ. ನಿನ್ನೆ ಸಂಜೆ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ಸಿದ್ಧತೆಯನ್ನು ಪರಿಶೀಲಿಸಿದರು.
ವರ್ಷದ ನಂತರ ರಾಯಚೂರಿಗೆ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ. ಚುನಾವಣೆ ಹತ್ತಿರದಲ್ಲಿರುವುದರಿಂದ ಬಿಜೆಪಿಯಿಂದ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಮಾಡಲು ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳೊಂದಿಗೆ, ರಾಜಕೀಯ ಚಟುವಟಿಕೆಗಳಿಗೆ ಉತ್ತೇಜನೆ ನೀಡುವ ಕಾರ್ಯಕ್ರಮದ ಭಾಗವಾಗಿ ಮುಖ್ಯಮಂತ್ರಿಗಳು ಪ್ರವಾಸವನ್ನು ಕೈಗೊಂಡಿದ್ದಾರೆ.

ಕೃಷಿ ವಿಶ್ವವಿದ್ಯಾಲಯ ಸ್ಥಳ ಪರಿಶೀಲನೆ ನಂತರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಹಠಾತ್ ಬೆಂಗಳೂರಿಗೆ ತೆರಳಿದ್ದಾರೆ. ಕಾರ್ಯಕ್ರಮ ನಿರ್ವಹಣೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಲು ಡಾ.ಶಿವರಾಜ ಪಾಟೀಲ್ ಅವರು ಬೆಂಗಳೂರಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ನಗರ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಚಾಲನೆ ಕಾರ್ಯಕ್ರಮ ಇನ್ನೂ ಚರ್ಚೆಯ ಹಂತದಲ್ಲಿವೆ. ಇದು ಇಂದು ಅಂತಿಮಗೊಳ್ಳುವ ಸಾಧ್ಯತೆಗಳಿವೆ. ಡಾ.ಶಿವರಾಜ ಪಾಟೀಲ್ ಅವರು ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ಉದ್ದೇಶಿತ ಕಾರ್ಯಕ್ರಮಕ್ಕೆ ಸ್ಪಷ್ಟತೆ ದೊರೆಯಲಿದೆ. ಕಾರ್ಯಕ್ರಮದಲ್ಲಿ ಎರಡು ಪ್ರತ್ಯೇಕ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ. ಒಂದು ವಿಶ್ವವಿದ್ಯಾಲಯ ಕಾರ್ಯಕ್ರಮ ಆದರೆ, ಮತ್ತೊಂದು ಕಡೆ ಶಾಸಕ ಡಾ.ಶಿವರಾಜ ಪಾಟೀಲ್ ಅವರ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.












Click it and Unblock the Notifications