• search
  • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಯಚೂರು; ಕರ್ನಾಟಕ ಪಬ್ಲಿಕ್ ಶಾಲೆಗೆ ಶಂಕು ಸ್ಥಾಪನೆ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಮೇ 29: "ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಸಕ್ತ ಸಾಲಿನಲ್ಲಿ 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಲಾಗುತ್ತಿದ್ದು, ಮಕ್ಕಳಿಗೆ ವಿಷಯವಾರು ಬೋಧನೆಗೆ ಅನುಕೂಲವಾಗಲಿದೆ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಸಚಿವರು ಶಂಕುಸ್ಥಾಪನೆ ಮಾಡಿದರು.

"ಈಗಾಗಲೇ ಶಿಕ್ಷಕರ ನೇಮಕಾತಿ ನಿಟ್ಟಿನಲ್ಲಿ ಸಿಇಟಿ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಬಂದ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಜೊತೆಗೆ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು" ಎಂದು ತಿಳಿಸಿದರು.

"ರಾಜ್ಯ ಸರ್ಕಾರ ಶಿಕ್ಷಣದ ಕಡೆ ಹೆಚ್ಚು ಒಲವು ತೋರುತ್ತಿದ್ದು, ಕಳೆದ ನಾಲ್ಕು ವರ್ಷದಲ್ಲಿ ರಾಜ್ಯದಲ್ಲಿ ಒಟ್ಟು ಏಳು ಸಾವಿರ ಶಾಲೆಯ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಮಾಡಿದೆ. ಶಿಕ್ಷಣದಲ್ಲಿ ಹಿಂದುಳಿದ ರಾಜ್ಯದ 93 ಪ್ರದೇಶಗಳನ್ನು ಗುರುತಿಸಲಾಗಿದ್ದು, ಶಿಕ್ಷಣದ ಪ್ರಗತಿಗೆ ವಿಶೇಷ ಗಮನ ಹರಿಸಲಾಗುವುದು, ಸರ್ಕಾರಿ ಶಾಲೆಗಳು ಮೂಲಸೌಕರ್ಯದಿಂದ ವಂಚಿತ ಆಗಬಾರದು ಎಂಬ ಉದ್ದೇಶದಿಂದ ತರಗತಿ ಕೊಠಡಿಗಳು, ಶೌಚಾಲಯ, ಪ್ರಯೋಗಾಲಯ ಸೇರಿದಂತೆ ಬೇಡಿಕೆ ಇರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ" ಎಂದು ಸಚಿವರು ವಿವರಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿ; "ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಕಂಕಣಬದ್ಧವಾಗಿದ್ದು, ಎಸ್‍ಡಿಎಂಸಿ ಸಮಿತಿ ಹಾಗೂ ಪೋಷಕರ ಸಹಭಾಗಿತ್ವ ಅತಿಮುಖ್ಯವಾಗಿದೆ. ಕೋವಿಡ್‌ನಿಂದ ಮಕ್ಕಳ ಕಲಿಕೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಇದನ್ನು ಹೋಗಲಾಡಿಸಿ ಸೃಜನಶೀಲ ಚಟುವಟಿಕೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸಿದೆ" ಎಂದರು.

ಜವಳಗೇರ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆ, ರೌಡಕುಂದಾ, ಗಾಂಧಿನಗರ ಮತ್ತು ವಲ್ಕಂದಿನ್ನಿ ಗ್ರಾಮಗಳಲ್ಲಿ ಪ್ರೌಢಶಾಲೆ ನಿರ್ಮಾಣ ಕಾಮಗಾರಿ ಹಾಗೂ ಸಿಂಧನೂರು ಕ್ಷೇತ್ರದಲ್ಲಿ 4.32 ಕೋಟಿ ವೆಚ್ಚದಲ್ಲಿ ಶಾಲೆ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಸಾಲಗುಂದಾ ಗ್ರಾಮದಲ್ಲಿ ನಿರ್ಮಾಣಗೊಂಡ ಪ್ರೌಢಶಾಲೆಯ ಉದ್ಘಾಟನೆಯನ್ನು ಸಚಿವ ಬಿ. ಸಿ. ನಾಗೇಶ್ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದ ವಿದ್ಯಾರ್ಥಿನಿಯರಾದ ಬಸವಲೀಲಾ, ಸಮನಾ, ಪೂಜಾ ಅವರನ್ನು ಸಚಿವರು ಸನ್ಮಾನಿಸಿದರು. ಸಂಸದ ಸಂಗಣ್ಣ ಕರಡಿ, ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು.

English summary
Education minister of Karnataka B. C. Nagesh laid foundation stone for Karnataka public school at Sindhanur, Raichur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X