ಮಸ್ಕಿ ಉಪ ಚುನಾವಣೆ; ಪ್ರಚಾರದ ಕಾವು ಹೆಚ್ಚಿಸಿದ ವಿಜಯೇಂದ್ರ
ರಾಯಚೂರು, ಏಪ್ರಿಲ್ 2; ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದೆ. ಏಪ್ರಿಲ್ 17ರಂದು ಉಪ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಶುಕ್ರವಾರ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಪ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಮಟ್ಟೂರು ಗ್ರಾಮದಲ್ಲಿ ಪ್ರಚಾರ ನಡೆಸಿದ ಅವರು, ಹಿರಿಯರ ಆಶೀರ್ವಾದವನ್ನು ಪಡೆದರು.
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್ ಸೇರಿದಂತೆ ಹಲವಾರು ನಾಯಕರು ವಿಜಯೇಂದ್ರ ಜೊತೆಗಿದ್ದರು.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಬಿರುಸಿನಿಂದ ಸಾಗಿದೆ. ಒಂದು ಕಡೆ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಕ್ಷೇತ್ರದಲ್ಲಿ ಪ್ರತಿದಿನ ಪ್ರಚಾರವನ್ನು ಕೈಗೊಂಡಿದ್ದಾರೆ.
ಮಸ್ಕಿ ಉಪ ಚುನಾವಣೆಗೆ ಬಿಜೆಪಿಯಿಂದ ಕ್ಷೇತ್ರದ ಮಾಜಿ ಶಾಸಕರೇ ಆದ ಪ್ರತಾಪ್ ಗೌಡ ಪಾಟೀಲ್ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಆರ್. ಬಸನಗೌಡ ತುರ್ವಿಹಾಳ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕ್ಷೇತ್ರದಲ್ಲಿ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸನಗೌಡ ತುರ್ವಿಹಾಳ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ.












Click it and Unblock the Notifications