ರಾಯಚೂರು ಮಂದಿಗೆ ಗುಡ್ ನ್ಯೂಸ್.. ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ..
ರಾಯಚೂರು ಮಂದಿಗೆ ಸಿಹಿ ಸುದ್ದಿಯೊಂದು ಹೊರಬಂದಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಈ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್ ಬೋಸರಾಜು ಖಾತರಿಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ರಾಯಚೂರು ಸಂಸದ ಜಿ. ಕುಮಾರ್ ನಾಯ್ಕ್ ನೇತೃತ್ವದ ನಿಯೋಗ ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಲು ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಮ್ ಮೋಹನ್ ಅವರು ಅನುಮತಿ ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ' ಎಂದು ಬೋಸರಾಜು ತಿಳಿಸಿದ್ದಾರೆ.

ರಾಯಚೂರಿನಲ್ಲಿ ನೂತನ ಗ್ರೀನ್ ಫೀಲ್ಡ್ ಏರ್‌ಪೋರ್ಟ್ ಮಾಡಲು ಕಾಂಗ್ರೆಸ್ ಸರ್ಕಾರ ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ ಈ ಬಗ್ಗೆ ಬಜೆಟ್‌ನಲ್ಲೂ ಪ್ರಸ್ತಾಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ಸರ್ಕಾರ ನೀಡುವುದಾಗಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ ಪಾಟೀಲ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕೂಡಾ ವಿಶೇಷ ಒತ್ತು ನೀಡಿದ್ದರು.
ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗೆ ಉತ್ತಮ ಸಂಪರ್ಕ ಏರ್ಪಡಲಿದೆ. ಇದರಿಂದಾಗಿ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ವಿಮಾನ ಪ್ರಾಧಿಕಾರ ಅನುಮತಿ ಸೇರಿ ಸಂಬಂಧಿಸಿದ ಇಲಾಖೆಗಳಿಂದ ಪರವಾನಗಿ ಪಡೆಯದೇ ಇರುವುದು ನಿಲ್ದಾಣ ಕಾಮಗಾರಿ ಪ್ರಾರಂಭಕ್ಕೆ ಅಡ್ಡಿಯಾಗಿದೆ. ವಿಜಯಪುರ ಮೂಲದ ಕೆಎಂವಿ ಲಿಮಿಡೆಟ್ ಎಂಬುವವರಿಗೆ ವಿಮಾನ ನಿಲ್ದಾಣ ಗುತ್ತಿಗೆ ಕಾಮಗಾರಿ ವಹಿಸಲಾಗಿದೆ. ಆದರೆ, ಸಂಬಂಧಿಸಿದ ಇಲಾಖೆಗಳ ಅನುಮೋದನೆ ಇಲ್ಲದೇ ಕಾಮಗಾರಿ ನಿರ್ವಹಿಸಲು ಸಾಧ್ಯವಾಗದೇ ವರ್ಷಗಳು ಉರುಳುವಂತಾಗಿದೆ.
ಕಳೆದ ಬಾರಿ ವಿಮಾನ ನಿಲ್ದಾಣ ಪ್ರಾಧಿಕಾರದ ಆರು ಜನ ಅಧಿಕಾರಿಗಳ ತಂಡ, ಯರಮರಸ್ ವಿಮಾನ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿ ಎಲ್ಲಆಯಾಮಗಳಲ್ಲಿ ಅಧ್ಯಯನ ನಡೆಸಿತ್ತು. ಯರಮರಸ್ ಶಾಖೋತ್ಪನ್ನ ಕೇಂದ್ರಗಳ ಚಿಮಣಿಯಿಂದ ಭವಿಷ್ಯದಲ್ಲಿ ವಿಮಾನ ಹಾರಾಟಕ್ಕೆ ತೊಂದರೆಯಾಗುವ ಕುರಿತು ಆಕ್ಷೇಪಣೆ ಸಲ್ಲಿಸಿತ್ತು.
ಸರಕಾರದಿಂದ 180 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿತ್ತು. ರೈಟ್ಸ್ ಸಂಸ್ಥೆ ನೀಡಿದ್ದ 216 ಕೋಟಿ ರೂ ಅಂದಾಜು ವಿಸ್ತೃತ ಯೋಜನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಅನುಮೋದನೆ ನೀಡಿ ಬಜೆಟ್‌ನಲ್ಲಿ ಘೋಷಣೆ ಮಾಡಿವೆ. ಆದರೆ, ರನ್ ವೇ ನಿರ್ಮಾಣ ಒಳಗೊಂಡಂತೆ ಇತರೆ ಷರತ್ತು ಪೂರೈಸಲು ಇನ್ನಷ್ಟು ಆರ್ಥಿಕ ನೆರವಿನೆ ಅವಶ್ಯಕತೆಯಿದೆ.












Click it and Unblock the Notifications