ಫ್ರೂಟ್ಸ್ ತಂತ್ರಾಂಶದ ಮೂಲಕ ಪರಿಹಾರದ ಹಣ ನೇರವಾಗಿ ರೈತರ ಖಾತೆಗೆ ವರ್ಗಾವಣೆ
ರಾಯಚೂರು ಜನವರಿ 17: ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷ ಪರಿಹಾರದ ಹಣವನ್ನು "ಫ್ರೂಟ್ಸ್" ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ರಾಯಚೂರಿನಲ್ಲಿ ಮಂಗಳವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, "ಸರ್ಕಾರ ಈ ಹಿಂದೆ ರೈತರ ಬರ ಪರಿಹಾರ ಹಣವನ್ನು ಅಧಿಕಾರಿಗಳ ಮೂಲಕ ತಲುಪಿಸುತ್ತಿತ್ತು. ಆದರೆ, ಈ ವೇಳೆ ಸಾಕಷ್ಟು ಹಣ ದುರ್ಬಳಕೆ ಪ್ರಕರಣಗಳೂ ಕಂಡು ಬರುತ್ತಿತ್ತು. ಪರಿಹಾರದ ಹಣವೂ ಸಿಗದೆ ರೈತರು ಪರಿತಪಿಸುವ ಸ್ಥಿತಿ ಇತ್ತು. ಹೀಗಾಗಿ ಈ ಎಲ್ಲಾ ಅಕ್ರಮಗಳಿಗೆ ತಡೆಯೊಡ್ಡುವ ಸಲುವಾಗಿ "ಫ್ರೂಟ್ಸ್" ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.

ಇದೀಗ ರಾಜ್ಯಾದ್ಯಂತ ಎಲ್ಲಾ ರೈತರ ಒಟ್ಟು ಜಮೀನಿನ ವಿಸ್ತೀರ್ಣ ಹಾಗೂ ಬೆಳೆ ಹಾನಿ ಕುರಿತ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಮೊದಲ ಕಂತಿನ ಪರಿಹಾರವನ್ನು ಯಾವುದೇ ತಾಂತ್ರಿಕ ದೋಷವಿಲ್ಲದೆ, ಹಣ ದುರುಪಯೋಗವಾಗದೆ ನೇರವಾಗಿ ರೈತರಿಗೆ ತಲುಪಿಸಲು ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇನ್ನೂ ಒಂದು ವಾರದೊಳಗೆ ರಾಜ್ಯದ 25 ಲಕ್ಷ ರೈತರು ಪರಿಹಾರ ಹಣ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಅಲ್ಲದೆ, ರಾಯಚೂರು ಜಿಲ್ಲೆಯಲ್ಲಿ 1.4 ಲಕ್ಷ ರೈತರ ಆಧಾರ್ ಹಾಗೂ ಆರ್‌ಟಿಸಿ ಹೊಂದಾಣಿಕೆಯಾಗಿಲ್ಲ. ಮುಂದಿನ ಎರಡು ದಿನಗಳಲ್ಲಿ ತಹಶೀಲ್ದಾರ್ ಗಳು ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕಿದೆ. ನಂತರ ರಾಯಚೂರಿನ ಎಲ್ಲಾ ರೈತರಿಗೆ ಪರಿಹಾರದ ಹಣವನ್ನು ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಗೆ ತಲುಪಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ರೈತರ ಆಧಾರ್ ಲಿಂಕ್ ನಮ್ಮ ಆದ್ಯತೆ:
ರೈತರ ಆರ್‌ಟಿಸಿ ಜೊತೆಗೆ ಆಧಾರ್ ಲಿಂಕ್ ಜೋಡಣೆ ನಮ್ಮ ಮುಂದಿನ ಆದ್ಯತೆಯಾಗಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ಗಮನ ಸೆಳೆದ ಅವರು, "ರಾಜ್ಯದಲ್ಲಿ ಸಣ್ಣ ರೈತರ ಸಂಖ್ಯೆ ಕನಿಷ್ಠ ಶೇ.77 ರಷ್ಟಿದೆ. ಆದರೆ, ಕೇಂದ್ರ ಸರ್ಕಾರದ ಅಂಕಿಅಂಶದ ಪ್ರಕಾರ ಈ ಸಂಖ್ಯೆ ಕೇವಲ ಶೇ.44 ರಷ್ಟು ಮಾತ್ರ. ಪರಿಣಾಮ ಕೇಂದ್ರದ ಮಾನದಂಡದ ಪ್ರಕಾರ ರಾಜ್ಯಕ್ಕೆ ಕನಿಷ್ಠ ಮೊತ್ತದ ಬರ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಸುವಾಗ ಅವರ ಆರ್ಟಿಸಿ ಜೊತೆಗೆ ಆಧಾರ್ ಲಿಂಕ್ ಮಾಡಬೇಕು. ಆ ಮೂಲಕ ಪರಿಹಾರದ ಹಣ ತಲುಪಿಸುವ ಜೊತೆಗೆ ರಾಜ್ಯದ ರೈತರ ನಿಖರ ಅಂಕಿಅಂಶ ಪಡೆಯಬಹುದು ಎಂದು ಅವರು ವಿವರಿಸಿದರು.
ಕುಡಿಯುವ ನೀರು ಪೂರೈಸಿ
ರಾಯಚೂರಿನ ಯಾವುದೇ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.
ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ರಾಯಚೂರು ಭಾಗದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ರಾಯಚೂರಿನ 374 ಗ್ರಾಮಗಳಲ್ಲಿ ಹಾಗೂ ನಗರ ಭಾಗದ 269 ವಾರ್ಡ್‌ಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ.

ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಬೇಕು. ಈಗಾಗಲೇ 59 ಖಾಸಗಿ ಬೋರ್ ವೆಲ್‌ಗಳನ್ನು ಗುರುತಿಸಲಾಗಿರುವುದು ಉತ್ತಮ ಬೆಳವಣಿಗೆ. ಅಧಿಕಾರಿಗಳು ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್ ಡಿ ಆರ್ ಎಫ್ ಹಣವನ್ನು ಬಳಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಈ ವೇಳೆ ಮಾತನಾಡಿದ ಮಾನಪ್ಪ ವಜ್ಜಲ್ ಮತ್ತು ಬಸನಗೌಡ ದದ್ದಲ್ ಮಾತನಾಡಿ, "ಪ್ರತಿಯೊಂದು ಕ್ಷೇತ್ರಕ್ಕೂ ಸರ್ಕಾರ ಸ್ವಂತ ಟ್ಯಾಂಕರ್ ಖರೀದಿಸಬೇಕು. ಇದಕ್ಕೆ ಕೆಕೆಆರ್‌ಡಿಬಿ ಹಣ ಬಳಸಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು" ಎಂದು ಸಚಿವರಿಗೆ ಮನವಿ ಮಾಡಿದರು.
ತಕರಾರು ಅರ್ಜಿಗಳ ವಿಲೇಗೆ ಕಟ್ಟುನಿಟ್ಟಿನ ಸೂಚನೆ
ಜನವರಿ ತಿಂಗಳ ನಂತರ 90 ದಿನಗಳಿಗೆ ಮೀರಿದ ಯಾವ ತಕರಾರು ಪ್ರಕರಣಗಳೂ ಸಹ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಉಳಿಯುವಂತಿಲ್ಲ, ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಬಗ್ಗೆ ಮಾತನಾಡಿದ ಸಚಿವರು, "ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಎಸಿ ಕೋರ್ಟ್ ಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 59,800 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 33,000 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿರುವ ಪ್ರಕರಣಗಳೂ ಸಹ ತ್ವರಿತ ಗತಿಯಲ್ಲಿ ಇತ್ಯರ್ಥವಾಗುತ್ತಿದೆ.
ತಕರಾರು ಪ್ರಕರಣಗಳ ಕಾರಣಕ್ಕೆ ಸಾರ್ವಜನಿಕರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿತ್ತು. ಆದರೆ, ಇದೀಗ ಅಧಿಕಾರಿಗಳು ಸೂಚನೆಯಂತೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲೂ ಸಹ ಅಧಿಕಾರಿಗಳು ಎಲ್ಲಾ ಜಿಲ್ಲೆಯಲ್ಲೂ ತ್ವರಿತಗತಿಯಲ್ಲಿ ಕಂದಾಯ ಇಲಾಖೆ ಪ್ರಕರಣಗಳನ್ನು ಮುಗಿಸಿ ಜನರಿಗೆ ತುಸು ನೆಮ್ಮದಿ ನೀಡಿ ಎಂದರು.












Click it and Unblock the Notifications