ರಾಯಚೂರು: ಕಾರು ಗುದ್ದಿದ ರಭಸಕ್ಕೆ 15 ಅಡಿ ದೂರ ಹಾರಿಬಿದ್ದ ವಿದ್ಯಾರ್ಥಿನಿ ಬದುಕುಳಿದಿದ್ದೇ ರೋಚಕ?
ರಾಯಚೂರು, ಜುಲೈ, 27: ಕಾರೊಂದು ಬೈಕ್ ಮತ್ತು ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ ಜಾಗ್ವಾರ್ ಕಾರು ಗುದ್ದಿದ ಘಟನೆ ರಾಯಚೂರು ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ. ಸದ್ಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ನಗರದ ಅಂಬೇಡ್ಕರ್ ವೃತ್ತದರಿಂದ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನ ಕ್ರಾಸ್ ಆಗುತ್ತಿತ್ತು. ಈ ವೇಳೆ ವೇಗವಾಗಿ ಬಂದ ಜಾಗ್ವಾರ್ ಕಾರು ಬೈಕ್ ಹಾಗೂ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇನ್ನು ಕಾರು ಡಿಕ್ಕಿಯಾದ ರಭಸಕ್ಕೆ ಓರ್ವ ವಿದ್ಯಾರ್ಥಿನಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದರೆ, ಮತ್ತೋರ್ವ ವಿದ್ಯಾರ್ಥಿನಿ 15 ಮೀಟರ್ ದೂರ ಹಾರಿಬಿದ್ದರೂ ಅದೃಷ್ಟವಶಾತ್ ಬದುಕಿ ಉಳಿದಿದ್ದಾಳೆ.
ಈ ಭಯಾನಕ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಪ್ರತಿಕ್ರಿಯೆಗಳ ಸರಮಾಲೆಯನ್ನೇ ಹರಿಸಿದ್ದಾರೆ. ಇನ್ನು ಈ ಪ್ರಕರಣ ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications