Bengaluru-mysuru expressway: ಸಂಗನಬಸವನ ದೊಡ್ಡಿ ಬಳಿ ಅಪಘಾತ, ಪ್ರಣಾಪಾಯದಿಂದ ಪಾರಾದ ಕಾರು ಹಾಗೂ ಲಾರಿ ಚಾಲಕರು
ರಾಮನಗರ ತಾಲೂಕಿನ ಸಂಗನಬಸವನ ದೊಡ್ಡಿ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಈ ವೇಳೆ ಲಾರಿ ಹಾಗೂ ಕಾರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಮನಗರ, ಮಾರ್ಚ್, 17: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಟೋಲ್ ಸಂಗ್ರಹ ವಿಚಾರವಾಗಿ ಸರ್ಕರ ಮತ್ತು ವಾಹನ ಸವಾರರ ನಡುವೆ ಘರ್ಷಣೆಗಳು ಆಗುತ್ತಲೇ ಇವೆ. ಹಾಗೆಯೇ ಈ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೀಗ ರಾಮನಗರ ತಾಲೂಕಿನ ಸಂಗಬಸವನ ದೊಡ್ಡಿ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಈ ವೇಳೆ ಲಾರಿ ಹಾಗೂ ಕಾರು ಚಾಲಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದ ನಂತರ ಲಾರಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಹಿಂಭಾಗ ಕಾರಿನ ಮೇಲೆ ಬಿದ್ದಿದ್ದು, ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಲಾರಿ ಹಾಗೂ ಕಾರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ವೇಗದ ಮಿತಿಯೇ ಇಲ್ಲ
ಹೆದ್ದಾರಿಯಲ್ಲಿ ವೇಗದ ಮಿತಿಯ ಸೂಚನಾ ಫಲಕ ಇಲ್ಲದ ಕಾರಣ ವಾಹನ ಸವಾರರು ವೇಗವಾಗಿ ಚಾಲನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರಿಂದ ಅದ್ದೂರಿಯಾಗಿ ಹೆದ್ದಾರಿಯನ್ನು ಉದ್ಘಾಟಿಸಿದ್ದರು. ಆ ದಿನವೇ ಮದ್ದೂರು ಬಳಿ ಅಪಘಾತ ಸಂಭವಿಸಿತ್ತು. ಕಾಮಗಾರಿ ಪ್ರಾರಂಭಗೊಂಡ ಬಳಿಕ, ಇಲ್ಲಿ ಇಂದಿನವರೆಗೆ ನೂರಾರು ಅಪಘಾತ ಪ್ರಕರಣಗಳು ಸಂಭವಿಸಿವೆ. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಪಘಾತ ಪ್ರಕರಣಗಳ ವಿವರ
ಗಂಟೆಗೆ 100ರಿಂದ 120 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಚಲಿಸುವಂತೆ ಎಕ್ಸ್‌ಪ್ರೆಸ್‌ವೇ ವಿನ್ಯಾಸಗೊಳಿಸಲಾಗಿದೆ. ಆದರೂ ಅಪಘಾತ ತಡೆಗೆ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಅಳವಡಿಸದೇ ಇರುವುದು ಅಪಘಾತ, ಸಾವು-ನೋವುಗಳಿಗೆ ಕಾರಣವಾಗಿದೆ. ಕಳೆದ 6 ತಿಂಗಳಿನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 335ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಅಲ್ಲದೇ 84ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಸಾವು, ನೋವುಗಳ ಅಂಕಿ-ಅಂಶಗಳು
ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲೇ ಸಂಭವಿಸಿದ ಅಪಘಾತಗಳ ಸಂಖ್ಯೆ 110ಕ್ಕೂ ಹೆಚ್ಚು ಸಂಭವಿಸಿವೆ. ಇದರಲ್ಲಿ 41 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ 200ಕ್ಕೂ ಹೆಚ್ಚು ಸಂಭವಿಸಿವೆ. 225 ಅಪಘಾತದಲ್ಲಿ 43 ಜನ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಲಕ್ಷ್ಮೀಪುರ ಗೇಟ್-ಮಣಿಪಾಲ್ ಆಸ್ಪತ್ರೆವರೆಗಿನ ಹೆದ್ದಾರಿಯಲ್ಲಿ ಈವರೆಗೆ ಸಂಭವಿಸಿದ 30 ಅಪಘಾತ ಪ್ರಕರಣಗಳಲ್ಲಿ 8 ಜನ ಸಾವನ್ನಪ್ಪಿದ್ದಾರೆ.

ಇನ್ನು ಬೆಂಗಳೂರಿನಿಂದ ಮೈಸೂರಿನವರೆಗೂ ಸುಮಾರು 130 ಕಿ.ಮೀ. ದೂರದ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಿಸಲಾಗಿದೆ. ಈಗಾಗಲೇ ಶೇಕಡಾ 80ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಬೆಂಗಳೂರಿನಿಂದ ಮಂಡ್ಯದವರೆಗೂ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನು ಅಲ್ಲಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನಿಂದ ಮೈಸೂರಿಗೆ ಕೆಲವೇ ಗಂಟೆಗಳಲ್ಲಿ ತಲುಪಬಹುದಾಗಿದೆ.
ಆದರೆ ಹೆದ್ದಾರಿಯಲ್ಲಿ ವಾಹನಗಳ ವೇಗದ ಮಿತಿಗೆ ಈವರೆಗೂ ಕಡಿವಾಣ ಬಿದ್ದಿಲ್ಲ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಅಪಘಾತದಿಂದಾಗಿ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ. ಹೆದ್ದಾರಿಯಲ್ಲಿನ ಅನಾಹುತಗಳ ಬಗ್ಗೆ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಅಸಮಾಧಾನ ಹೊರಹಾಕುತ್ತಿದ್ದು, ಅಪೂರ್ಣ ಕಾಮಗಾರಿಯೇ ಇವೆಲ್ಲದಕ್ಕೆ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ.












Click it and Unblock the Notifications