Bengaluru-Mysuru Expressway: 158.81 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಸಿಎಂ ಸಿದ್ದರಾಮಯ್ಯ
ಮಂಡ್ಯ, ಜುಲೈ, 29: ಸಿಎಂ ಸಿದ್ದರಾಮಯ್ಯ ಅವರು ಇಂದು (ಶನಿವಾರ ಜುಲೈ 29) ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, 158.81 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದೇವೆ. ಈ ಕಾರ್ಯಗಳು ನವೆಂಬರ್ ನಂತರ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಅವರು ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು, ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್‌ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ ಎಂದರು.

ಸ್ಪೀಡ್ ಡಿಟೆಕ್ಟರ್‌ಗಳನ್ನು 10 ಕಿಲೋ ಮೀಟರ್ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಇನ್ನು ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ
ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ, ಅದನ್ನು ಎನ್.ಹೆಚ್.ಐ.ಎ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು. ಇನ್ನು ನಂತರ ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ, ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ನಿತಿನ್ ಗಡ್ಕರಿ ಹೇಳಿದ್ದೇನು?
ಹಾಗೆಯೇ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿರುವ ಅಪಘಾತ ಹಾಗೂ ಸಾವುಗಳ ಕುರಿತು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಹೆದ್ದಾರಿಯಲ್ಲಿ ಸರ್ಕಾರ ತೆಗೆದುಕೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆಯೂ ಗಡ್ಕರಿ ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ ಲೋಕಸಭೆಯಲ್ಲಿ ಮಾತನಾಡಿರುವ ಅವರು ಜನವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರಾರಂಭವಾಯಿತು. ಪ್ರಧಾನಿ ಮೋದಿ ಅವರು ಈ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟನೆ ಮಾಡಿದರು. ಅಲ್ಲಿಂದ ಈ ವರೆಗೆ ನೂರಾರು ಅಪಘಾತಗಳು ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಲ್ಲಿ ನಡೆದಿರುವ ಅಪಘಾತಗಳ ಬಗ್ಗೆ ಕೇಳಲಾಗಿರುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ಈ ಹೆದ್ದಾರಿಯಲ್ಲಿ ಜನವರಿಯಿಂದ ಈ ವರೆಗೆ ಒಟ್ಟು 398 ಅಪಘಾತಗಳು ನಡೆದಿದೆ. ಈ ಅಪಘಾತಗಳಲ್ಲಿ 121 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.
ಬೆಂಗಳೂರು-ಮದ್ದೂರು ಮತ್ತು ಮದ್ದೂರು-ಮೈಸೂರು, ಎರಡು ವಿಭಾಗಗಳ ಅಡಿಯಲ್ಲಿ ಕಳೆದ ಏಳು ತಿಂಗಳಲ್ಲಿ ಸುಮಾರು 398 ಅಪಘಾತಗಳು ಸಂಭವಿಸಿವೆ ಎಂದು ಗಡ್ಕರಿ ತಿಳಿಸಿದ್ದಾರೆ. ಬೆಂಗಳೂರು-ಮದ್ದೂರು ನಡುವಿನ ಅಪಘಾತದಲ್ಲಿ 59 ಮಂದಿ ಸಾವನ್ನಪ್ಪಿದ್ದರೆ, ಮದ್ದೂರಿನಿಂದ ಮೈಸೂರುವರೆಗಿನ ಎರಡನೇ ವಿಭಾಗದಲ್ಲಿ 62 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications