ರಾಮನಗರ; ಕಾರು, ಆಟೋ ಎಳೆದು ಕಾಂಗ್ರೆಸ್ ಪ್ರತಿಭಟನೆ
ರಾಮನಗರ, ಮಾರ್ಚ್ 09; ರೈತ ವಿರೋಧಿ ಕರಾಳ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಪೆಟ್ರೋಲ್, ಡಿಸೇಲ್ ಹಾಗೂ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ರಾಮನಗರದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಮಂಗಳವಾರ ರಾಮನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯು ನಗರದ ಐಜೂರು ವೃತ್ತದಿಂದ ಪ್ರಾರಂಭಗೊಂಡು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಎಲ್‌ಪಿಜಿ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳವನ್ನು ಖಂಡಿಸಿದರು. ಸಿಲಿಂಡರ್ ತಲೆ ಮೇಲೆ ಹೊತ್ತು, ಕಾರು, ಟ್ಯ್ರಾಕ್ಟರ್ ಮತ್ತು ಆಟೋಗಳಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸತತ 105 ದಿನಗಳಿಂದ ರೈತರು ಕೇಂದ್ರದ ರೈತ ವಿರೋಧಿ ನೀತಿಗಳ ವಿರುದ್ದ ಹೋರಾಟ ಮಾಡಿಕೊಂಡು ಬರುತ್ತಲೆ ಇದ್ದಾರೆ. ಚಳಿ, ಮಳೆ, ಎನ್ನದೆ ನೂರಾರು ದಿನಗಳಿಂದ ಹೋರಾಟ ಮಾಡುತ್ತಿದ್ದರು ಕೂಡ ಕೇಂದ್ರ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರಸ್ ಮುಖಂಡರು ಆರೋಪಿಸಿದರು.
ಪ್ರತಿದಿನ ಕೂಡ ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರುತ್ತಲೆ ಇದೆ. ಆದರೂ ಕೂಡ ಸರ್ಕಾರ ಮಾತ್ರ ಜಾಣ ಕುರುಡು ಪ್ರದರ್ಶನ ಮಾಡಿಕೊಂಡು ಬರುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಹೆಚ್. ಸಿ. ಬಾಲಕೃಷ್ಣ, ಎಂಎಲ್‌ಸಿ ಸಿ. ಎಂ. ಲಿಂಗಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications