Channapatna By Election: ಚನ್ನಪಟ್ಟಣದ ಅಭ್ಯರ್ಥಿ ಘೋಷಣೆ ಮಾಡಿದ ಡಿಕೆಶಿ!
ಬೆಂಗಳೂರು, ಆಗಸ್ಟ್ 15: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಉಪ ಚುನಾವಣೆ ಎದುರಾಗಿದ್ದು, ಸಿ. ಪಿ. ಯೋಗೇಶ್ವರ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.
ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಗುರುವಾರ ನೆಲಮಂಗಲದ ಕಾವಾಡಿ ಮಠದ ಶ್ರೀರುದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಗವಂತನು ಸಕಲರಿಗೂ ಒಳ್ಳೆಯದನ್ನು ಮಾಡಲಿ, ನಾಡಿನ ಪ್ರಗತಿಯಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಡಿ. ಕೆ. ಶಿವಕುಮಾರ್, 'ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ" ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಪ್ರಸ್ತುತ ಕನಕಪುರ ಕ್ಷೇತ್ರದ ಶಾಸಕ ಡಿ. ಕೆ. ಶಿವಕುಮಾರ್ ಚನ್ನಪಟ್ಟಣದಿಂದ ಕಣಕ್ಕಿಳಿಯಲಿದ್ದಾರೆಯೇ? ಎಂಬ ಚರ್ಚೆಯನ್ನು ಈ ಹೇಳಿಕೆ ಹುಟ್ಟು ಹಾಕಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚನ್ನಪಟ್ಟಣದಲ್ಲಿ ಗುರುವಾರ ನಡೆದ ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿ. ಕೆ. ಶಿವಕುಮಾರ್, "ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನು ಕೇಳಿದ್ದೆ, ಅವರು ಬಂದಿಲ್ಲ ಅಂದರು. ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ" ಎಂದರು.
ಡಿ. ಕೆ. ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಹೊಸ ವಿಚಾರ ಏನಲ್ಲ. ಈ ಕುರಿತು ಹಲವು ಬಾರಿ ಚರ್ಚೆಗಳು ನಡೆದಿವೆ. ಚನ್ನಪಟ್ಟಣಕ್ಕೆ ಅವರು ಪದೇ ಪದೇ ಭೇಟಿ ನೀಡುತ್ತಿದ್ದು, ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ, ಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.
ಚನ್ನಪಟ್ಟಣ ಕೇಂದ್ರ ಸಚಿವ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ ತವರು ಕ್ಷೇತ್ರ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತವರು ಜಿಲ್ಲೆ ರಾಮನಗರ ಜಿಲ್ಲೆಯಲ್ಲಿರುವ ಕ್ಷೇತ್ರವಾದ ಕಾರಣ ಉಪ ಚುನಾವಣೆ ಗೆಲುವಿನಲ್ಲಿ ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಪ್ರತಿಷ್ಠೆ ಅಡಗಿದೆ.
ಕಾಂಗ್ರೆಸ್ ಚನ್ನಪಟ್ಟಣ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯಾಗಿ ಹುಡುಕಾಟ ನಡೆಸುತ್ತಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ಎಸ್. ಪಡೆದಿದ್ದು ಕೇವಲ 15,374 ಮತಗಳು.
ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬಿಜೆಪಿಯ ಸಿ. ಪಿ. ಯೋಗೇಶ್ವರ 80,677 ಮತ ಪಡೆದು ಸೋಲು ಕಂಡರು. 2024ರ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಕಣಕ್ಕಿಳಿದು ಗೆದ್ದ ಕುಮಾರಸ್ವಾಮಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಉಪ ಚುನಾವಣೆ ಎದುರಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಸೋತ ಡಿ. ಕೆ. ಸುರೇಶ್ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಎಂಬ ಸುದ್ದಿಗಳು ಹಬ್ಬಿದ್ದವು. ಬಳಿಕ ಡಿ. ಕೆ. ಶಿವಕುಮಾರ್ ಅವರೇ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿ ಎಚ್. ಡಿ. ಕುಮಾರಸ್ವಾಮಿಗೆ ಹಿನ್ನಡೆ ಉಂಟು ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಈಗ ಡಿ. ಕೆ. ಶಿವಕುಮಾರ್ "ನಾನೇ ಅಭ್ಯರ್ಥಿ" ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚನ್ನಪಟ್ಟಣ ಉಪ ಚುನಾವಣೆ ಎದುರಿಸುತ್ತಿವೆ. ಎಂಎಲ್‌ಸಿ ಸಿ. ಪಿ. ಯೋಗೇಶ್ವರ ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಆದರೆ ಇನ್ನೂ ಅವರಿಗೆ ಟಿಕೆಟ್ ಸಿಗುವ ಕುರಿತು ಯಾವುದೇ ಘೋಷಣೆಯಾಗಿಲ್ಲ. ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಅವರು ಘೋಷಣೆ ಮಾಡಿದ್ದಾರೆ.












Click it and Unblock the Notifications