ರಾಮನಗರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು, ನಾಯಿ ಮರಿ ಬಚಾವ್
ರಾಮನಗರ, ಸೆಪ್ಟೆಂಬರ್ 17: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು-ಮಂಗಳೂರು ಹೆದ್ದಾರಿಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ನಡೆದಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರು ಎನ್ನಲಾಗಿದೆ.
ಕುಣಿಗಲ್ನಿಂದ ಬೆಂಗಳೂರು ಕಡೆ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿ ಮಾಗಡಿ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಅಪಘಾತದಲ್ಲಿ ಆಶ್ಚರ್ಯವೆಂದರೆ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ನಾಯಿ ಮರಿಯೊಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದೆ. ಸದ್ಯ ಗಾಯಗೊಂಡಿರುವ ನಾಯಿ ಮರಿಗೆ ಮಾಗಡಿ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












Click it and Unblock the Notifications