Nikhil Kumaraswamy: ಕರ್ನಾಟಕಕ್ಕೆ ನರೇಂದ್ರ ಮೋದಿ, ಅಮಿತ್ ಶಾ; ಏನಂದ್ರು ನಿಖಿಲ್ ಕುಮಾರಸ್ವಾಮಿ?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇದೀಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಲುವಿಗಾಗಿ ಉರಿ ಬಿಸಿಲಿನಲ್ಲಿಯೂ ಪ್ರಚಾರ ಕಾರ್ಯ ಚುರುಕಾಗಿ ನಡೆದಿದೆ.
ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯಕ್ಕೆ ರಾಷ್ಟ್ರೀಯ ನಾಯಕರು ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಒಂದು ರೌಂಡ್ ಹಾಕಿ ಹೋಗಿದ್ದಾರೆ.

ಇನ್ನು ಏಪ್ರಿಲ್ 23ರಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕಾಂಗ್ರೆಸ್ ನಾಯಕ ರಾಹುಲ್ ಅವರು ಬಸವ ಜಯಂತಿ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಲಿದ್ದಾರೆ.
ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ರೋಡ್ ಶೋ ಮತ್ತು ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನು ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಅವರಿಂದ ಸರಣಿ ಸಮಾವೇಶಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಯುವ ನಾಯಕ ಹಾಗೂ ರಾಮನಗರ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯಕ್ಕೆ ನರೇಂದ್ರ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿ ಪಕ್ಷಕ್ಕೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

"ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ನೆಲ ಕಚ್ಚಿದೆ. ರಾಜ್ಯ ಸರ್ಕಾರ ಕೇವಲ ಹಗರಣದಲ್ಲಿ ಮುಳುಗಿದೆ ಎಂದ ಅವರು, ಈ ಬಾರಿ ರಾಜ್ಯದಲ್ಲಿ 123 ಸ್ಥಾನವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಸಾಮರ್ಥ್ಯವನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ," ಎಂದು ವ್ಯಂಗ್ಯವಾಡಿದರು.
"ಕೇಂದ್ರ ಬಿಜೆಪಿ ನಾಯಕರೇ ಪ್ರಚಾರಕ್ಕೆ ಬರುವ ಅನಿವಾರ್ಯ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿಯಾಗಿದೆ. 2018-19ರಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಜನರು ಮತ ನೀಡಿದ್ದರು. ಆದರೆ ಈ ಬಾರಿ ನೀಡುವುದಿಲ್ಲ. ಅದರ ಬದಲು ರಾಜ್ಯದ ಮತದಾರರು ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ," ಎಂದು ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.
"ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಅತ್ಯಂತ ಉತ್ಸಾಹದಿಂದ ಯುವಕರ ಜೊತೆ ಕೈಜೋಡಿಸಿ ಶಕ್ತಿಮೀರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದು ತಿಳಿಸಿದರು.

"ಕಳೆದ 29 ವರ್ಷಗಳಿಂದ ನಿರಂತರವಾಗಿ ಕ್ಷೇತ್ರ ಹಾಗೂ ಇಡೀ ರಾಮನಗರ ಜಿಲ್ಲೆಗೆ ಅತ್ಯಂತ ಪ್ರಾಮಾಣಿಕವಾಗಿ ಎಚ್.ಡಿ. ದೇವೇಗೌಡರು ಹಾಗೂ ಎಚ್.ಡಿ. ಕುಮಾರಸ್ವಾಮಿಯವರು ದುಡಿದಿದ್ದಾರೆ. ಈ ದುಡಿಮೆಯನ್ನು ಗುರುತಿಸುವಂತಹ ಕೆಲಸವನ್ನು ಕ್ಷೇತ್ರದ ಜನರು ಮಾಡುತ್ತಾರೆ. ಒಬ್ಬ ಯುವಕನಿಗೆ ಅವಕಾಶವನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇನೆ," ಎಂದು ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನಾವಾಗಿದೆ.












Click it and Unblock the Notifications