ರಾಜ್ಯದ ಸರ್ಕಾರದ ಪತನ ಖಚಿತ: ಡಿಕೆಶಿ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: HDK ಕಿಡಿ
ರಾಮನಗರ, ಅಕ್ಟೋಬರ್ 08: ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ರಾಜಕೀಯ ನಾಶ ಮಾಡಿದ್ದರ ಬಗ್ಗೆ ಇಂದಿಗೂ ಕಿಡಿ ಕಾರುತ್ತಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕವಾಗಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ನಾನು ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.

ರಾಮನಗರ ಜಿಲ್ಲೆಯ ಬಿಡದಿಯ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಕುಮಾರಸ್ವಾಮಿ ಅವರು ಮಾತನಾಡಿದರು. 2018 ಸರ್ಕಾರ ಪತನವಾಗಿದ್ದು, ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ.
ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ?
ಡಿಕೆ ಶಿವಕುಮಾರ್ ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ?. ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಅವರಿ ಪ್ರಚಾರ ಪಡೆದರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು ವಿವರಿಸಿದರು.
ರಾಜ್ಯದಲ್ಲಿ ಈಗಿನ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದೇ ತೀರುತ್ತದೆ. ಆ ಚುನಾವಣೆಗೆ ಆ ವ್ಯಕ್ತಿ ಅಭ್ಯರ್ಥಿ ಆಗುವುದೇ ಅನುಮಾನ, ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಅವರನ್ನು ಮತ್ತೆ ಪರೋಕ್ಷವಾಗಿ ತಿವಿದರು.

ಡಿಕೆಶಿ ಮತ್ತೆ ತಿಹಾರ ಜೈಲಿಗೆ ಹೋಗುತ್ತಾರೆ
ಭವಿಷ್ಯದಲ್ಲಿ ಇನ್ನೆಂದು ಅವರ ಜೊತೆಗೆ ರಾಜಿ ಮಾಡಿಕೊಳ್ಳುವುದಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಿದ್ದೇವೆ. ಅವರು ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಶಾಶ್ವತವಾಗಿ ಹೋದರೂ ಅಚ್ಚರಿ ಅಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು.
ಇನ್ನೂ ಕನಕಪುರ ಕ್ಷೇತ್ರ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್‌ನವರನ್ನು ನಂಬಿ ನಾನು ಕುತ್ತಿಗೆ ಕುಯ್ದುಕೊಂಡಿದ್ದೇನೆ, ನಿಮ್ಮ (ಪಕ್ಷದ ಮುಖಂಡರು) ಕುತ್ತಿಗೆಯನ್ನು ಕುಯ್ದಿದ್ದೇನೆ. ಅವರಿಂದ ನನಗೆ, ನಿಮಗೆ ಅನ್ಯಾಯ ಆಗಿದೆ. ಅದನ್ನು ಬಿಟ್ಟರೆ ಕನಕಪುರ ಜನರಿಗೆ ನನ್ನಿಂದ ಎಳ್ಳಷ್ಟೂ ಅನ್ಯಾಯ ಆಗಿಲ್ಲ. ಸದ್ಯ ಆಗಿರುವ ಅನ್ಯಾಯ ಸರಿಪಡಿಸುವೆ ಎಂದು ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.
ಮೈತ್ರಿ ಅಭ್ಯರ್ಥಿ ಪರವಾಗಿ ಶ್ರಮ ಹಾಕಿ: ಎಚ್‌ಡಿಕೆ ಕರೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕು. ಅದಕ್ಕೆ ನೀವೆಲ್ಲರೂ ಶ್ರಮ ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೈತ್ರಿಕೂಟದ ಮೂಲಕ ಇಡೀ ರಾಜ್ಯಕ್ಕೆ ದೇಶಕ್ಕೆ ನಾವು ಒಳ್ಳೆಯ ಸಂದೇಶ ಕೊಡಬೇಕು ಎಂದರು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಮಧ್ಯದ ಮೈತ್ರಿಕೂಟದಲ್ಲಿ ಯಾರೇ ಅಭ್ಯರ್ಥಿ ಆದರೂ ನಾವು ಒಟ್ಟಾಗಿ ಕೆಲಸ ಮಾಡೋಣ. ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.












Click it and Unblock the Notifications