ರಾಮನಗರದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡದಂತೆ ಎಚ್‌ಡಿಕೆ ಆಗ್ರಹ
ರಾಮನಗರ, ಆಗಸ್ಟ್ 27: ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್‌ನ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಸಾರ್ವಜನಿಕರು, ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ರಾಮನಗರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡೋದು ಬೇಡ ಅಂತಾ ನಾನು ರಾಜ್ಯ ಸರ್ಕಾರ, ಆರೋಗ್ಯ ಸಚಿವರು ಹಾಗೂ ಡಿಸಿಎಂಗೂ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅವಧಿಯಲ್ಲಿ ಕನಕಪುರಕ್ಕೆ ಮೆಡಿಕಲ್ ಕಾಲೇಜಿಗೆ 100 ಕೋಟಿ ಹಣ ಬಿಡುಗಡೆ ಮಾಡಿದ್ದೇವು. ಸ್ವತಃ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಂದು ವೈದ್ಯಕೀಯ ಸಚಿವರಾಗಿದ್ದರು. ಕಾಲೇಜು ನಿರ್ಮಾಣಕ್ಕೆ ಟೆಂಡರ್ ಕೊಟ್ಟಿದ್ದೇವು. ಆ ಯೋಜನೆ ಇನ್ನೂ ಜೀವಂತವಾಗಿದೆ. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕನಕಪುರಕ್ಕೆ ಕೊಟ್ಟಿದ್ದ ಕಾಲೇಜ್ ಅನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ನಿಮ್ಮದೇ ಸರ್ಕಾರ ಇದೆ. ನಾನು ಕೊಟ್ಟಿದ್ದ ಆ ಮೆಡಿಕಲ್ ಕಾಲೇಜಿಗೆ ಜೀವಕೊಡಿ ಎಂದು ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಲಹೆ ನೀಡಿದರು.

ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ಬೇಡ
2006ರಲ್ಲಿ ರಾಮನಗರಕ್ಕೆ ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಬಂತು. ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಆಸ್ಪತ್ರೆ ಬೇಕು ಅಂತ ನಾನು ಕನಸು ಕಂಡಿದ್ದೆ. 600 ಕೋಟಿ ರೂಪಾಯಿ ವೆಚ್ಚದಲ್ಲಿ ಹಿಂದಿನ ಸರ್ಕಾರ ಎರಡೂ ಸದನದಲ್ಲಿ ಅನುಮೋದನೆ ಕೊಟ್ಟಿತ್ತು. ಈಗ ಮೆಡಿಕಲ್ ಕಾಲೇಜು ಸ್ಥಳಾಂತರ ಸರಿಯಲ್ಲ. ಇದು ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಪರಿಣಾಮ ಬೀರುತ್ತದೆ ಎಂದರು.
ಜಿಲ್ಲಾ ಕೇಂದ್ರ ಬಿಟ್ಟು ಅಲ್ಲೆಲ್ಲೋ ಮೂಲೆಗೆ ಮೆಡಿಕಲ್ ಕಾಲೇಜು ಸ್ಥಳಾಂತರ ಅವೈಜ್ಞಾನಿಕ. ಹೀಗೆ ಆದರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿಗಳು ಬರಲ್ಲ. ರಾಮನಗರ ಜಿಲ್ಲಾ ಕೇಂದ್ರ, ಇಲ್ಲಿ ಮೆಡಿಕಲ್ ಕಾಲೇಜು ಬಂದರೆ ಸುತ್ತಮುತ್ತಲಿನ ತಾಲೂಕಿಗಳಿಗೂ ಅನುಕೂಲ. ಕನಕಪುರಕ್ಕೆ ಮೆಡಿಕಲ್ ಕಾಲೇಜು ಬೇಕೇಬೇಕು ಅಂದರೆ ಅವರದ್ದೇ ಸರ್ಕಾರ ಇದೆ. ಹೊಸ ಕಾಲೇಜು ಮಂಜೂರು ಮಾಡಿಕೊಳ್ಳಲಿ ಎಂದು ಆಗ್ರಹಿಸಿದರು.

ಮುಂದಿನ ಬಜೆಟ್‌ನಲ್ಲಿ ರಾಮನಗರಕ್ಕೆ ಮೆಡಿಕಲ್ ಕಾಲೇಜು ಮುಂಜೂರು ಮಾಡಿಸುವ ಎಂಬ ಉಸ್ತುವಾರಿ ಸಚಿವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಮುಂದಿನ ಬಜೆಟ್ ಮಂಡನೆ ಆಗದಿದ್ರೆ.? ಎಂದು ಪ್ರಶ್ನೆ ಮಾಡಿದರು, ಬಜೆಟ್‌ನಲ್ಲಿ ತರೋದು ಬೇರೆ ವಿಚಾರ. ರಾಜೀಗಾಂಧಿ ವಿವಿ ಆವರಣದಲ್ಲಿ ಕಾಲೇಜು ನಿರ್ಮಾಣದ ಕೆಲಸ ಪ್ರಾರಂಭವಾಗಿದೆ. ಇಂತಹ ಸನ್ನಿವೇಶದಲ್ಲಿ ಅದನ್ನ ನಿಲ್ಲಿಸಿ ಕನಕಪುರಕ್ಕೆ ಶಿಫ್ಟ್ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.












Click it and Unblock the Notifications