Bengaluru-Mysuru Expressway: ಟೋಲ್ ಸಂಗ್ರಹಕ್ಕೆ ಭಾರಿ ವಿರೋಧ, "ಕೈ" ಕಾರ್ಯಕರ್ತರು ಪೊಲೀಸರ ವಶಕ್ಕೆ
ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇನ ಟೋಲ್ ಸಂಗ್ರಹವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರ, ಮಾರ್ಚ್, 14: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಭಾನುವಾರ (ಮಾರ್ಚ್ 12) ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದರು. ನಂತರ ಈ ಹೆದ್ದಾರಿಯಲ್ಲಿ ವಾನಹಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಮಂಗಳವಾರ (ಮಾರ್ಚ್ 14) ಟೋಲ್ ಸಂಗ್ರಹವನ್ನು ಆರಂಭ ಮಾಡಿದ್ದಾರೆ. ಈ ವಿಚಾರಕ್ಕೆ ಹಲವು ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹಾಗಾದರೆ ಸಂಘಟನೆಗಳ ನಿಲುವು ಏನು ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಮಂಗಳವಾರ (ಮಾರ್ಚ್ 14) ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು.

ಬೆಂಗಳೂರು-ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟೋಲ್ ಶುಲ್ಕದ ವಿವರ
ಕಾರು, ಜೀಪು, ವ್ಯಾನ್ಗಳಿಗೆ ಏಕಮುಖ ಸಂಚಾರಕ್ಕೆ 135 ರೂ. ದರ ನಿಗದಿ ಮಾಡಿದ್ದಾರೆ. ಎರಡೂ ಕಡೆಗೆ 205 ರೂ. ನಿಗದಿ ಮಾಡಲಾಗಿದೆ. ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ ನಿಗದಿ ಮಾಡಲಾಗಿದೆ. ಹಾಗೆಯೇ ಬಸ್/ಟ್ರಕ್ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ., ನಿಗದಿಪ ಮಾಡಿದ್ದಾರೆ.

ಕಾಂಗ್ರೆಸ್, ಕನ್ನಡ ಪರ ಸಂಘಟನೆಗಳಿಂದ ವಿರೋಧ
ಸರ್ಕಾರ ಇಂದು ಬೆಳಗ್ಗೆ ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರಿ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಟೋಲ್ ಸಂಗ್ರಹ ವಿರೋಧಿಸಿ ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
ಆದ್ದರಿಂದ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್ ಬಳಿ 3 ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications