ಈ ಶಾಲೆಯಲ್ಲಿ 180 ಮಕ್ಕಳಿಗೆ 3 ಶಿಕ್ಷಕರು: ಪೋಷಕರ ಆಕ್ರೋಶ
ರಾಮನಗರ, ಜೂನ್ 7: ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಪೋಷಕರು ವಿದ್ಯಾರ್ಥಿಗಳೊಂದಿಗೆ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿರುವ ಘಟನೆ ಚನ್ನಪಟ್ಟಣದ ಮಂಗಳವಾರಪೇಟೆ ಬಡಾವಣೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮಂಗಳವಾರಪೇಟೆ ಬಡಾವಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕರ ಕೊರತೆ ಖಂಡಿಸಿ ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಹಾಗೂ ಪೋಷಕರು. ಸರ್ಕಾರ ಬಾಯಿ ಮಾತಿನಲ್ಲಿ "ಶಿಕ್ಷಣ ಮಕ್ಕಳ ಹಕ್ಕು " ಎನ್ನುತ್ತೆ ಆದರೆ ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.
ಸುಮಾರು 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಮಂಗಳವಾರಪೇಟೆ ಶಾಲೆಯಲ್ಲಿ 5 ಜನ ಶಿಕ್ಷಕರಿದ್ದು ಇದರಲ್ಲಿ ಒಬ್ಬರು ದೈಹಿಕ ಶಿಕ್ಷಕರು ಹಾಗೂ ಮತ್ತೊಬ್ಬರು ಚಿತ್ರಕಲೆ ಶಿಕ್ಷಕರಾಗಿದ್ದು ಶಾಲೆಯಲ್ಲಿ ಇಂಗ್ಲೀಷ್ ಹಾಗೂ ವಿಜ್ಞಾನ ವಿಷಯ ಬೋಧನೆ ಮಾಡಲು ಶಿಕ್ಷಕರಿಲ್ಲದೆ ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣ ಮರೀಚಿಕೆಯಾಗಿದೆ.

ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ
ಸರ್ಕಾರ ಒಂದೆಡೆ ಶಿಕ್ಷಣ-ಮಕ್ಕಳ ಹಕ್ಕು ಎಂದು ಹೇಳುತ್ತಾ ಇನ್ನೊಂದೆಡೆ ಅಗತ್ಯಕ್ಕೆ ತಕ್ಕಂತೆ ಶಾಲೆಗೆ ಶಿಕ್ಷಕರನ್ನು ನೇಮಿಸದಿರುವುದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕಳೆದ ವರ್ಷದಿಂದಲೂ ಈ ಶಾಲೆಗೆ ಶಿಕ್ಷಕರ ಸಮಸ್ಯೆ ಇದ್ದರು ಎಚ್ಚೆತ್ತುಕೊಳ್ಳದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಶಾಲೆಗೆ ಅಗತ್ಯವಾದ ಹಾಗೂ ನುರಿತ ಶಿಕ್ಷಕರನ್ನು ನೇಮಕ ಮಾಡಬೇಕು, ನಮ್ಮ ಅಹವಾಲನ್ನು ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ.

900 ಶಿಕ್ಷಕರ ಕೊರತೆ
ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕೋಟ್ಯಾಂತರ ರೂಪಾಯಿ ಹಣವನ್ನು ಖರ್ಚು ಮಾಡುತ್ತಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲವನ್ನು ಉಚಿತವಾಗಿ ನೀಡುತ್ತದೆ. ಆದರೆ ಪಾಠ ಪ್ರವಚನ ಮಾಡುವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ವಿಫಲವಾಗಿದೆ. ರಾಮನಗರ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲೆಯ ಹಲವು ಶಾಲೆಗಳಲ್ಲಿ ಶಿಕ್ಷಕರೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಒಟ್ಟು 1718 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿದ್ದು 142143 ವಿದ್ಯಾರ್ಥಿಗಳು ಇದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸುಮಾರು 900 ಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ.

ಶೀಘ್ರದಲ್ಲೇ ಅತಿಥಿ ಶಿಕ್ಷಕರ ನೇಮಕ
ಶಿಕ್ಷಕರ ಕೊರತೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಡಿಪಿಐ ಗಂಗಣ್ಣಗೌಡ, ಜಿಲ್ಲೆಯಲ್ಲಿ 686 ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಪ್ರೌಢಶಾಲೆಯಲ್ಲಿ 217 ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲೆಯ ವಿಭಾಗದಲ್ಲಿ ಭಾಷಾವಾರು ಅತಿಥಿ ಶಿಕ್ಷಕರನ್ನು ಒಮ್ಮೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಈ ವರ್ಷದ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ. ಸಮವಸ್ತ್ರಗಳು ಬರಬೇಕಿದ್ದು, ಬಂದ ತಕ್ಷಣ ವಿತರಣೆ ಮಾಡಲಾಗುತ್ತದೆ. ಎಲ್ಲಾ ಶಾಲೆಗಳಲ್ಲಿ ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಹಾಲು ಹಾಗೂ ಮಧ್ಯಾಹ್ನ ಬಿಸಿಯೂಟವನ್ನು ಅಚ್ಚುಕಟ್ಟಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪೋಷಕರಲ್ಲಿ ಆತಂಕ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆಯ ನೆಪವೊಡ್ಡಿ ಶಾಲೆಗಳನ್ನು ಮುಚ್ಚುವ ಮೂಲಕ ಖಾಸಗೀ ಶಾಲೆಗಳಿಗೆ ಉತ್ತೇಜನ ನೀಡಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬಂದ ಹಿನ್ನಲೆಯಲ್ಲಿ ಸರಕಾರ, ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ಸಫಲವಾಯಿತು. ಸರಕಾರದ ಪ್ರಯತ್ನ ಹಾಗೂ ಮಹಾಮಾರಿ ಕೋವಿಡ್ ಕಾಟದಿಂದ ನರಳಿದ್ದ ಜನರು, ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ ಸರ್ಕಾರಿ ಶಾಲೆಯತ್ತ ಮುಖ ಮಾಡಿದ್ದರು. ಇದರ ಫಲವಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿದೆ. ಇಂತಹ ಸನ್ನಿವೇಶದಲ್ಲಿ ಶಿಕ್ಷಕರ ಕೊರತೆಯಿದೆ ಎಂದರೆ ಯಾರು ತಾನೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ ಎಂದು ಪೋಷಕರು ಅಸಮಧಾನ ಹೊರ ಹಾಕಿದ್ದಾರೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications