Bengaluru-Mysuru Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ
Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹಾಗೆಯೇ ಇದೀಗ ಇಂದು (ಫೆಬ್ರವರಿ 15) ಎರಡು ಕಾರುಗಳು ಅಪಘಾತಕ್ಕಿಡಾಗಿ ಇಬ್ಬರು ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಬಳಿಯ ಇದೇ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಬ್ಯಾರಿಕೇಡ್ ಇದೆ ಎಂದು ದಿಢೀರ್ ಬ್ರೇಕ್ ಹಾಕಿ ನಿಂತಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ.
ಈ ವೇಳೆ ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
8 ಜನ ಸಾವು: ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದು, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.
ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು.
ಮೂವರು ಸ್ಥಳದಲ್ಲಿ ಸಾವು: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ಘಟನೆ ನಡೆದಿದ್ದು, ಅಪಘಾತ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನಿಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ












Click it and Unblock the Notifications