ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳು ವಶಕ್ಕೆ, ಮೂವರಿಗಾಗಿ ಶೋಧ
ಶಿವಮೊಗ್ಗ, ಫೆಬ್ರವರಿ 21: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಐದು ಜನರು ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅವರಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದವನಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ಮೂವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಏನಿದು ಘಟನೆ?
ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲಿ ಭಾನುವಾರ ರಾತ್ರಿ 30ರ ಸಮಯಕ್ಕೆ ನೆತ್ತರೋಕುಳಿ ಹರಿದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಬಿಗುವಿನ ವಾತಾವರಣ
ಹರ್ಷ, ಭಜರಂಗದಳ ಸಂಘಟನೆಯಲ್ಲಿ ಕಳೆದ ಐದು ವರ್ಷಗಳಿಂದ ತೊಡಗಿಸಿಕೊಂಡಿದ್ದ. ಆತನ ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ ನಗರದಲ್ಲಿ ಚಿತ್ರಣ ದಿಢೀರ್ ಬದಲಾಗಿದೆ. ತಕ್ಷಣ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಾದ್ಯಂತ ಅಂಗಡಿ, ಹೊಟೇಲ್‌ಗಳನ್ನು ಬಂದ್ ಮಾಡಿಸಿದ್ದಾರೆ. ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ
ಹತ್ಯೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಫೆ.23ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಬಿಗುವಿನ ವಾತಾವರಣ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.












Click it and Unblock the Notifications