ಉಪ ಚುನಾವಣೆಗೆ ಒಂದು ವಾರದಲ್ಲಿ ಬಿಜೆಪಿ ಪಟ್ಟಿ
ಶಿವಮೊಗ್ಗ, ಜು. 20 : ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ ಒಂದು ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು.
ಶಿವಮೊಗ್ಗದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ, ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. [ಉಪ ಚುನಾವಣೆ ವೇಳಾಪಟ್ಟಿ]

ಕರ್ನಾಟಕದ ಜನರು ಕಾಂಗ್ರೆಸ್ ಆಡಳಿತ ನೋಡಿ ಬೇಸತ್ತು ಹೋಗಿದ್ದಾರೆ. ಮಹಿಳೆಯರಿಗೆ, ಮಕ್ಕಳಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲವಾಗಿದೆ. ನಿದ್ದೆ ಮಾಡುತ್ತಿರುವ ಸರ್ಕಾರ ನಮಗೆ ಬೇಡ ಎಂದು ಜನರು ತೀರ್ಮಾನ ಮಾಡಿದ್ದು, ಅವರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು.
ಜು.26ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಮುಂದಿನ ಒಂದು ವಾರದಲ್ಲಿ ಪಕ್ಷದ ನಾಯಕರ ಜೊತೆ ಸಭೆ ನಡೆಸಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಈಶ್ವರಪ್ಪ ತಿಳಿಸಿದರು. ಶಿಕಾರಿಪುರಲ್ಲಿ ಬಿ.ವೈ.ರಾಘವೇಂದ್ರ ಅವರು ಅಭ್ಯರ್ಥಿಯೇ? ಎಂಬ ಪ್ರಶ್ನೆಗೆ ಕಾದು ನೋಡಿ ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.
ಸರ್ಕಾರ ನಿದ್ದೆ ಮಾಡುತ್ತಿದೆ : ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳನ್ನು ಪ್ರಸ್ತಾಪಿಸಿದ ಈಶ್ವರಪ್ಪ ಅವರು, ರಾಜ್ಯದ ಮುಖ್ಯಮಂತ್ರಿಗಳು ಮಾತ್ರ ನಿದ್ರೆ ಮಾಡುತ್ತಿಲ್ಲ. ಸರ್ಕಾರವೂ ನಿದ್ದೆ ಮಾಡುತ್ತಿದೆ. ಅದನ್ನು ಎಚ್ಚರಗೊಳಿಸಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು. [ನಿದ್ದೆ ಸಮಸ್ಯೆ : ಪ್ರಾಣಾಯಾಮಕ್ಕೆ ಸಿಎಂ ಶರಣು]
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವರು ವಿಫಲರಾಗಿದ್ದಾರೆ. ಈ ಕುರಿತು ಸದನದಲ್ಲಿ ವಿಷಯ ಪ್ರಸ್ತಾಪಿಸಲಾಗುವುದು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.


Click it and Unblock the Notifications
