ಬಿಜೆಪಿಗೆ ವಿಜಯೇಂದ್ರ ಸಾರಥಿ; ಶಿವಮೊಗ್ಗ ಲೋಕಸಭೆ ಕದನ ಕುತೂಹಲ!
ಶಿವಮೊಗ್ಗ, ಡಿಸೆಂಬರ್ 05; ಶಿಕಾರಿಪುರದ ಶಾಸಕ, ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಸಾರಥಿಯ ಆಯ್ಕೆ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ಅದರಲ್ಲೂ ಶಿವಮೊಗ್ಗ ಕ್ಷೇತ್ರದಲ್ಲಿನ ಕದನ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರು ಬಿ. ವೈ. ವಿಜಯೇಂದ್ರ ಸಹೋದರ ಬಿ. ವೈ. ರಾಘವೇಂದ್ರ. ಜಿಲ್ಲೆಯಲ್ಲಿ ಬಿಜೆಪಿ ತನ್ನದೇ ಆದ ಪ್ರಭಾವವನ್ನು ಹೊಂದಿದೆ. ಯಡಿಯೂರಪ್ಪ ಹೆಸರು, ಪ್ರಭಾವದಿಂದ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ.

2024ರಲ್ಲಿಯೂ ಹಾಲಿ ಸಂಸದ ಬಿ. ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಶಿಕಾರಿಪುರದ ಶಾಸಕ ಬಿ. ವೈ. ವಿಜಯೇಂದ್ರ ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಿಸಿಕೊಂಡು ಬರಲೇಬೇಕಾದ ಅನಿವಾರ್ಯತೆ ಇದೆ. ಆದರೆ ಎದುರಾಳಿಗಳು ಯಾರು? ಎಂಬುದು ಯಾರ ಊಹೆಗೂ ನಿಲುಕದ ಸಂಗತಿಯಾಗಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್; 2019ರ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಕಡೇ ಕ್ಷಣದ ತನಕ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಸೊರಬದಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದ ಮಧು ಬಂಗಾರಪ್ಪರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಯಿತು.
ಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ 7,29,872 ಮತಗಳನ್ನು ಪಡೆದು ಜಯಗಳಿಸಿದರು. ಮಾಜಿ ಸಿಎಂ ಎಸ್. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ 506512 ಮತಗಳನ್ನು ಪಡೆದು ಸೋಲು ಕಂಡರು. ಬಳಿಕ ಜೆಡಿಎಸ್ ಚಟುವಟಿಕೆಗಳಿಂದ ದೂರವಾದರು. 2021ರಲ್ಲಿ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಮಧು ಬಂಗಾರಪ್ಪ ಬಿಜೆಪಿಯ ಅಭ್ಯರ್ಥಿ, ಸಹೋದರ ಕುಮಾರ್ ಬಂಗಾರಪ್ಪ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಹೌದು.
ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಯಾರನ್ನು ಅಭ್ಯರ್ಥಿ ಮಾಡಲಿದೆ? ಎಂಬುದು ಕುತೂಹಲ ಯಾರೇ ಅಭ್ಯರ್ಥಿಯಾದರೂ ಸಹ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಮಧು ಬಂಗಾರಪ್ಪ ಮೇಲೆ ಹೆಚ್ಚಿನದಾಗಿ ಇರಲಿದೆ. ಮಾಜಿ ಸಂಸದ ಆಯನೂರು ಮಂಜುನಾಥ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ, ತೀರ್ಥಹಳ್ಳಿಯ ಮಾಜಿ ಶಾಸಕ ಕಿಮ್ಮನೆ ರತ್ನಾಕರ ಮುಂತಾದವರ ಹೆಸರುಗಳು ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬರುತ್ತಿವೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಬಿಜೆಪಿ ನಾಯಕ ಆಯನೂರು ಮಂಜುನಾಥ 2023ರ ಚುನಾವಣೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಬಳಿಕ ಬಿಜೆಪಿ ಬಿಟ್ಟು, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಜೆಡಿಎಸ್ ಸೇರಿದರು.
ಜೆಡಿಎಸ್‌ನಿಂದ ಶಿವಮೊಗ್ಗ ನಗರದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು 8,863 ಮತಗಳನ್ನು ಮಾತ್ರ ಪಡೆದು ಹೀನಾಯ ಸೋಲು ಕಂಡರು. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಅವರನ್ನೇ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಾಡಬಹುದು ಎಂಬುದು ಲೆಕ್ಕಾಚಾರವಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಮೊಗ್ಗ ಗ್ರಾಮೀಣದಲ್ಲಿ ಜೆಡಿಎಸ್, ಭದ್ರಾವತಿ, ಸಾಗರ, ಸೊರಬದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಶಿವಮೊಗ್ಗ ನಗರ, ತೀರ್ಥಹಳ್ಳಿ ಮತ್ತು ಶಿಕಾರಿಪುರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಬೈಂದೂರು ಕ್ಷೇತ್ರ ಸಹ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಸೇರಿದ್ದು ಬಿಜೆಪಿ ಶಾಸಕರಿದ್ದಾರೆ.
ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ. ಆದ್ದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಬೆಂಬಲವೂ ಬಿಜೆಪಿಗೆ ಸಿಗಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯಲಿದೆ?. ಆದರೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದೇ ಕುತೂಹಲವಾಗಿದೆ.
ಇನ್ನು ಶಿವಮೊಗ್ಗ ಕ್ಷೇತ್ರದಲ್ಲಿ 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಅಭ್ಯರ್ಥಿಯಾಗಿದ್ದರು. 242,911 ಮತಗಳನ್ನು ಪಡೆದು 606,216 ಮತಗಳನ್ನು ಪಡೆದ ಬಿ. ಎಸ್. ಯಡಿಯೂರಪ್ಪ ವಿರುದ್ಧ ಸೋಲು ಕಂಡಿದ್ದರು. ಆಗ ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿ 240,636 ಮತಗಳನ್ನು ಪಡೆದಿದ್ದರು.
2009ರ ಚುನಾವಣೆಯಲ್ಲಿ ಎಸ್. ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 429,890 ಮತಗಳನ್ನು ಪಡೆದು ಬಿಜೆಪಿಯ ಬಿ. ವೈ. ರಾಘವೇಂದ್ರ (482,783 ಮತ) ವಿರುದ್ಧ ಸೋಲು ಕಂಡಿದ್ದರು. ಪ್ರತಿ ಲೋಕಸಭೆ ಚುನಾವಣೆಗೆ ಹೊಸ ಹೊಸ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕ್ಷೇತ್ರದಲ್ಲಿ ಕಣಕ್ಕಿಳಿಸುತ್ತಿದೆ. ಆದರೆ ಗೆಲುವು ಮಾತ್ರ ಮರೀಚಿಕೆಯಾಗಿದೆ.












Click it and Unblock the Notifications