ಪ್ರಪಂಚದ ದುಷ್ಟ ಮುಖ್ಯಮಂತ್ರಿ ಕುಮಾರಸ್ವಾಮಿ: ಈಶ್ವರಪ್ಪ ಟೀಕೆ
Recommended Video

ಶಿವಮೊಗ್ಗ, ಸೆಪ್ಟೆಂಬರ್ 20: ಬಿಜೆಪಿ ವಿರುದ್ಧ ದಂಗೆ ನಡೆಸುವಂತೆ ಜನರಿಗೆ ಕರೆ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಜಗತ್ತಿನ ಅತ್ಯಂತ ದುಷ್ಟ ಮುಖ್ಯಮಂತ್ರಿ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಟೀಕಿಸಿದ್ದಾರೆ.
ಕುಮಾರಸ್ವಾಮಿ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ದಂಗೆ ನಡೆಸುವಂತೆ ಕರೆ ನೀಡಿದ್ದಾರೆ. ಈ ಮೂಲಕ ತಾವು ಕ್ರೂರಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದರು.

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ 20 ತಿಂಗಳು ಅಧಿಕಾರ ನಡೆಸಿದ್ದರು. ಈಗ ಮೂರು ತಿಂಗಳಿನಲ್ಲಿಯೇ ಮುಖ್ಯಮಂತ್ರಿ ಸ್ಥಾನದ ಗೌರವವನ್ನು ಹಾಳು ಮಾಡಿದ್ದಾರೆ. ದಂಗೆ ನಡೆಸುವಂತೆ ಅವರು ನೀಡಿರುವ ಹೇಳಿಕೆ ಅಕ್ಷಮ್ಯ ಅಪರಾಧ ಎಂದರು.
ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಜನರೇ ಅವರ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಮಾಡಿದರೆ ನಾವು ಕೈಕಟ್ಟಿ ಕೂರುವುದಿಲ್ಲ, ತಕ್ಕ ಶಾಸ್ತಿ ಮಾಡುತ್ತೇವೆ, ಬಿಜೆಪಿ ವಿರುದ್ಧ ದಂಗೆ ಏಳುವಂತೆ ನಾನೇ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ ಎಂದು ಹಾಸನದಲ್ಲಿ ಕುಮಾರಸ್ವಾಮಿ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಅಲ್ಲದೆ ದಂಗೆ ಏಳುವಂತೆ ಕರೆ ನೀಡಿದ ಕುಮಾರಸ್ವಾಮಿ ವಿರುದ್ಧ ರಾಜದ್ರೋಹ ಕೇಸು ದಾಖಲಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.












Click it and Unblock the Notifications