ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ಕಾಗೋಡು ಸ್ಪರ್ಧಿಸೋಲ್ಲ!
ಬೆಂಗಳೂರು, ಫೆ.19 : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ಸ್ಪೀಕರ್ ಮತ್ತು ಸಾಗರ ಕ್ಷೇತ್ರದ ಶಾಸಕ ಕಾಗೋಡು ತಿಮ್ಮಪ್ಪ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳಿಗೆ ತೆರೆಬಿದ್ದಿದೆ. ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಾಗೋಡು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಸುದ್ದಿಗಳು ಸುಳ್ಳು. ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದರಿಂದ ಪುನಃ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. [ಬಿಎಸ್ವೈ ವಿರುದ್ಧ ಕಾಗೋಡು ಸ್ಪರ್ಧೆ]

ಸೋಮವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಣಕ್ಕಿಳಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂಬ ಸುದ್ದಿ ಹಬ್ಬಿತ್ತು.
ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡಲು ಕಾಗೋಡು ತಿಮ್ಮಪ್ಪ ಸರಿಯಾದ ಅಭ್ಯರ್ಥಿ ಎಂದು ಕಾಂಗ್ರೆಸ್ ನಿರ್ಧರಿಸಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿತ್ತು. ಆದರೆ, ಈ ವಿಚಾರವನ್ನು ತಳ್ಳಿ ಹಾಕಿರುವ ಕಾಗೋಡು ತಿಮ್ಮಪ್ಪ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು]
ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಬಳಿಕ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳಿಗಾಗು ಹುಟುಕಾಟ ಆರಂಭಿಸಿತ್ತು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕುಮಾರ್ ಬಂಗಾರಪ್ಪ, ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಚಂದ್ರಶೇಖರಪ್ಪ ಪುತ್ರ ಸೇರಿದಂತೆ ಹಲವರು ಹೆಸರುಗಳಿದ್ದವು. ಸಚಿವ ಕಿಮ್ಮನೆ ರತ್ನಾಕರ್ ಮತ್ತು ಕಾಗೋಡು ತಿಮ್ಮಪ್ಪ ಅವರ ಹೆಸರುಗಳು ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಸೇರಿಕೊಂಡಿದ್ದವು. [ಕಾಂಗ್ರೆಸ್ ಸಂಭಾವ್ಯ ಪಟ್ಟಿ]
ಆದರೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಈಗಾಗಲೇ ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಯಡಿಯೂರಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡುವ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿಲ್ಲ.
ವಿಧಾನಸಭೆ ಚುನಾವಣೆಯಲ್ಲಿ ಏಳು ಕ್ಷೇತ್ರಗಳಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಬೇಕೆಂದು ಸಿದ್ದವಾಗಿದೆ. ಹಾಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಕ್ಷೇತ್ರದ ಸಂಸದರಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪುತ್ರನ ಬದಲು ಸ್ವತಃ ಯಡಿಯೂರಪ್ಪ ಕಣಕ್ಕೆ ಇಳಿದಿದ್ದು, ಕಾಂಗ್ರೆಸ್ ಪಾಲಿಗೆ ಸಂಕಷ್ಟ ತಂದೊಡ್ಡಿದೆ.
ಕ್ಷೇತ್ರದಲ್ಲಿ ಜೆಡಿಎಸ್ ಬಂಗಾರಪ್ಪ ಕುಟುಂಬದವರಿಗೆ ಟಿಕೆಟ್ ನೀಡಲಿದೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದ್ದರಿಂದ ಕಾಂಗ್ರೆಸ್ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಸಂಭಾವ್ಯ ಪಟ್ಟಿಯಲ್ಲಿ ಒಬ್ಬರು ಹೊರಗುಳಿಯಲಿದ್ದು ಉಳಿದವರಲ್ಲಿ ಯಾರಿಗೆ ಟಿಕೆಟ್ ಎಂಬ ಪ್ರಶ್ನೆ ಎದುರಾಗಿದೆ.












Click it and Unblock the Notifications