ಮಳೆಗಾಲದಲ್ಲಿ ಜೋಗ ಜಲಪಾತ ವೀಕ್ಷಣೆಗೆ ಹೋಗುವ ಪ್ರವಾಸಿಗರಿಗೆ ಸಿಹಿಸುದ್ದಿ
ಶಿವಮೊಗ್ಗ, ಮೇ 13: ಮಳೆಗಾಲ ಆರಂಭವಾಗಲು ಕೆಲವೇ ದಿನಗಳು ಬಾಕಿ ಇದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಏರಿಕೆಯಾಗಲಿದೆ. ಜೋಗದಲ್ಲಿ ಕೈಗೊಂಡಿರುವ ವಿವಿಧ ಮೂಲ ಸೌಕರ್ಯ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳ್ಳಲಿದ್ದು, ಪ್ರವಾಸಿಗರಿಗೆ ಉತ್ತಮ ದರ್ಜೆಯ ಸೌಲಭ್ಯಗಳು ಸಿಗಲಿವೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜೋಗ ಜಲಪಾತಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಮಳೆಗಾಲ ಆರಂಭವಾಗುತ್ತಿದ್ದಂತೆ ಜೋಗಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಮೂಲ ಸೌಕರ್ಯಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಚಿವ ಮಧು ಬಂಗಾರಪ್ಪ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ವೀರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಜೋಗದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಈ ಕುರಿತು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ವಿಶ್ವ ವಿಖ್ಯಾತ ಪ್ರವಾಸಿ ತಾಣವಾದ ಜೋಗ ಜಲಪಾತಕ್ಕೆ ಭೇಟಿ ನೀಡಿ ಅಲ್ಲಿನ ಮುಖ್ಯದ್ವಾರದ ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಸಮಗ್ರ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲಿಸಿ ಅಗತ್ಯ ಸಲಹೆಗಳನ್ನು ನೀಡಲಾಯಿತು' ಎಂದು ಹೇಳಿದ್ದಾರೆ.
'ಜೋಗ ಜಲಪಾತಕ್ಕೆ ಮಳೆಗಾಲ ಆರಂಭವಾಗುತ್ತಿದ್ದಂತೆ ಪ್ರವಾಸಿಗರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಮೂಲಭೂತ ಸೌಕರ್ಯಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮತ್ತು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು' ಎಂದು ತಿಳಿಸಿದ್ದಾರೆ.
ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ ಬಳಿ ಸಚಿವರು ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ಜೋಗ ಜಲಪಾತವನ್ನು ಅತ್ಯುತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಳಿಸಲು ವಿವಿಧ ಮೂಲ ಸೌಕರ್ಯ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದರು. ಅಧಿಕಾರಿಗಳೊಂದಿಗೆ ಕಾಮಗಾರಿಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ, ಸೂಚನೆಗಳನ್ನು ಕೊಟ್ಟರು.
ಸುಮಾರು 184 ಕೋಟಿ ರೂ. ವೆಚ್ಚದಲ್ಲಿ ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿಗೆ ತೊಂದರೆಯಾಗದಂತೆ ಕೆಲವು ದಿನಗಳ ಕಾಲ ಜೋಗಕ್ಕೆ ಪ್ರವಾಸಿಗರ ಭೇಟಿಯನ್ನು ಸಹ ನಿರ್ಬಂಧಿಸಲಾಗಿತ್ತು. ಮುಖ್ಯದ್ವಾರದ ಕಾಮಗಾರಿ ಈಗ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.
ಸರ್ವ ಋತು ಪ್ರವಾಸಿ ತಾಟವಾಗಿ ಜೋಗವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿದೆ. ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದ್ದರಿಂದ ವಿವಿಧ ಮೂಲ ಸೌಕರ್ಯ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ ಅನುದಾನ ಸಹ ಬಿಡುಗಡೆಯಾಗಿದೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು.
ಜೋಗ ಜಲಪಾತದ ವೀಕ್ಷಣೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆ ಮನರಂಜನೆಯನ್ನು ಒದಗಿಸಲು ಹೈದರಾಬಾದ್‌ನ ರಾಮೋಜಿ ಸಿಟಿ ಹಾಗೂ ಬಾಂಬೆ ಅಧ್ಯಯನ ಪ್ರವಾಸ ಕೈಗೊಂಡು ಯೋಜನೆಯನ್ನು ರೂಪಿಸಲಾಗಿದೆ. ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಬಹುತೇಕ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ.
ವಿವಿಧ ಕಾಮಗಾರಿಗಳನ್ನು 2021ರಲ್ಲಿ ಪ್ರಾರಂಭಿಸಲಾಯಿತು. "ಈ ಸ್ಥಳವನ್ನು ಮಾದರಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಇದು ವಿದೇಶಗಳಿಗೆ ಸಹ ಮಾದರಿಯಾಗಲಿದೆ. ಈ ಸ್ಥಳಕ್ಕೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಲಿದೆ. ಪ್ರವಾಸಿಗರು ವರ್ಷಪೂರ್ತಿ ಈ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುವುದೇ ಉದ್ದೇಶವಾಗಿದೆ" ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
"ಜೋಗದ ಆಕರ್ಷಣೆಯನ್ನು ಇನ್ನಷ್ಟು ಹೆಚ್ಚಿಸಲು ರೈನ್ ಡ್ಯಾನ್ಸ್, ಜಲಪಾತಕ್ಕೆ ಬೆಳಕಿನ ವ್ಯವಸ್ಥೆ, ರೋಪ್ ವೇ, ಗ್ಲಾಸ್‌ಹೌಸ್ ಮತ್ತು ಇತರ ಚಟುವಟಿಕೆಗಳನ್ನು ಸೇರಿಸಲಾಗುತ್ತದೆ. ಜಲಪಾತದ ಸುತ್ತಲಿನ ಪ್ರದೇಶವನ್ನು ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ.












Click it and Unblock the Notifications