Santosh Patil Suicide Case: ಮಧ್ಯಾಹ್ನ 1 ಗಂಟೆಗೆ ಸಚಿವ ಈಶ್ವರಪ್ಪರಿಂದ ಮಹತ್ವದ ಸುದ್ದಿಗೋಷ್ಠಿ
ಶಿವಮೊಗ್ಗ, ಏಪ್ರಿಲ್ 13: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹುದ್ದೆಗೆ ಕಂಟಕ ತರುವ ಲಕ್ಷಣಗಳು ಗೋಚರಿಸುತ್ತಿವೆ.
ಎರಡು ದಿನಗಳಿಂದ ಮೈಸೂರು ಪ್ರವಾಸದಲ್ಲಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಮೈಸೂರಿನಿಂದ ಬೆಂಗಳೂರಿಗೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರು ದಿಢೀರನೇ ಮೈಸೂರಿನಿಂದ ಶಿವಮೊಗ್ಗಕ್ಕೆ ತೆರಳಲಿದ್ದಾರೆ.
ಅಲ್ಲದೇ ಇಂದು (ಬುಧವಾರ) ಮಧ್ಯಾಹ್ನ 1 ಗಂಟೆಗೆ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಏನು ಹೇಳಲಿದ್ದಾರೆ ಎಂಬುದು ರಾಜ್ಯದ ಜನರ ಕುತೂಹಲ ಮೂಡಿಸಿದೆ.

ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಚಿವ ಈಶ್ವರಪ್ಪ ಅವರ ಬೆಂಗಳೂರು ಹಾಗೂ ಶಿವಮೊಗ್ಗದ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗಾಂಧಿ ಭವನದ ರಸ್ತೆಯಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಸಭೆ ನಡೆಸಲಿರುವ ರಾಜ್ಯ ಗುತ್ತಿಗೆದಾರರ ಸಂಘ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಗುತ್ತಿಗೆದಾರರ ಸಂಘದಿಂದ ಇಂದು ಸಭೆ ನಡೆಯಲಿದೆ. ಕರ್ನಾಟಕ ಗುತ್ತಿಗೆದಾರರ ಸಂಘದಿಂದ ಬೆಳಗ್ಗೆ 11 ಗಂಟೆಗೆ ನಗರದ ಚಾಮರಾಜಪೇಟೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಗುತ್ತಿಗೆದಾರರ ಸಮಸ್ಯೆ ಹಾಗೂ ಸಂತೋಷ್ ಪ್ರಕರಣದ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ
40% ಕಮಿಷನ್‌ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಇಂದು (ಏಪ್ರಿಲ್ 13, 2022ರ ಬುಧವಾರ) ಬೆಳಗ್ಗೆ 9.00 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಕಾಂಗ್ರೆಸ್ ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧ್ರುವನಾರಾಯಣ್, ಸತೀಶ್ ಜಾರಕಿಹೊಳಿ ಹಾಜರಿದ್ದರು.












Click it and Unblock the Notifications