PM Modi Shivamogga Visit; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ
ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಫೆಬ್ರವರಿ 24; ಭಾರತದ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಜನರನ್ನು ತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಬಸ್‌ಗಳನ್ನು ಒಪ್ಪಂದದ ಮೇಲೆ ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಕ್ಕಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಫೆ. 26ರ ಮಧ್ಯಾಹ್ನದಿಂದ ಫೆಬ್ರವರಿ 27ರ ತನಕ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜನರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ ಎಂದು ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದ್ದಾರೆ.
200 ಬಸ್‌ಗಳು ತೆರಳುವುದರಿಂದ ಶಿವಮೊಗ್ಗದಿಂದ ಸಂಚಾರ ನಡೆಸುವ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ವಾರದ ಮೊದಲ ದಿನವಾದ ಸೋಮವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಜನರು, ಶಾಲಾ/ ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ತಿಳಿಸಿದ್ದಾರೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಮೋದಿ ಶಿವಮೊಗ್ಗದ ಕಾರ್ಯಕ್ರಮಗಳು
* ನರೇಂದ್ರ ಮೋದಿ ಫೆಬ್ರವರಿ 27ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನ ದೇಶದ ಅಂದಾಜು 9 ಕೋಟಿ ಅರ್ಹ ರೈತರಿಗೆ ತಲಾ 2,000ದಂತೆ ಒಟ್ಟು ಸುಮಾರು 18000 ಕೋಟಿ ಮೊತ್ತವನ್ನು ಡಿ.ಬಿ.ಟಿ. ಮೂಲಕ ನೇರವಾಗಿ ಬಿಡುಗಡೆ ಮಾಡಲಿದ್ದಾರೆ.

* ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 526.04 ಕೋಟಿ ವೆಚ್ಚದಲ್ಲಿ ಒಟ್ಟು 2,25,700 ಮನೆಗಳಿಗೆ ನಲ್ಲಿ ನೀರು ಸರಬರಾಜು ಸಂಪರ್ಕ ಕಲ್ಪಿಸುವ ಹಾಗೂ ಬಹುಗ್ರಾಮ ಕುಡಿಯುವ ನೀರು ಅಡಿಯಲ್ಲಿ 12 ಕಾಮಗಾರಿಗಳನ್ನು ರೂ. 1,478.70 ಕೋಟಿ ವೆಚ್ಚದಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
* ಶಿವಮೊಗ್ಗ ಸ್ಮಾರ್ಟ್ ಸಿಟಿ ಅಡಿಯಲ್ಲಿ ಒಟ್ಟು ರೂ. 896.16 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 44 ಯೋಜನೆಯ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 2016ರಲ್ಲಿ 2ನೇ ಹಂತದಲ್ಲಿ ಕೇಂದ್ರ ಸರ್ಕಾರವು ಆಯ್ಕೆ ಮಾಡಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 500 ಕೋಟಿಯಂತೆ ಒಟ್ಟು 1000 ಕೋಟಿಗಳ ವೆಚ್ಚದಲ್ಲಿ ಲೈಟ್ ಹೌಸ್ ಸಿಟಿಗಳಾಗಿ ಮತ್ತು ಭವಿಷ್ಯದ ವಾಸಯೋಗ ನಗರಗಳಾಗಿ 5 ವರ್ಷಗಳಲ್ಲಿ ಅಭಿವೃದ್ಧಿಪಡಿಸುವುದು ಈ ಯೋಜನೆಯ ಗುರಿಯಾಗಿತ್ತು.
* ರಾಷ್ಟ್ರೀಯ ಹೆದ್ದಾರಿ ಇಲಾಖೆಯ ವತಿಯಿಂದ 7 ರಸ್ತೆ ಯೋಜನೆಗಳಡಿ 101.511 ಕಿ.ಮಿ. ರಸ್ತೆ- ರೂ. 970.90 ಕೋಟಿ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶಿವಮೊಗ್ಗದ ವಿದ್ಯಾನಗರ ಎಲ್.ಸಿ. 46 ಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮೂಲಕ ದ್ವಿಪಥದ ವೃತ್ತಾಕಾರದ ರೈಲ್ವೆಮೇಲ್ಸೇತುವೆ-ರೂ. 43.90 ಕೋಟಿ ಕಾಮಗಾರಿಯ ಉದ್ಘಾಟನೆ.
* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗದ ರೂ. 612.42 ಕೋಟಿ ಹಾಗೂ ಕೋಟೆಗಂಗೂರಿನಲ್ಲಿ ರೂ 76.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.












Click it and Unblock the Notifications