ಡಿಡಿಪಿಐ, ಬಿಇಒ ತವರು ಜಿಲ್ಲೆಯಲ್ಲಿ ಕೆಲಸ ಮಾಡುವಂತಿಲ್ಲ
ಶಿವಮೊಗ್ಗ, ಅ.20 : ತವರು ಜಿಲ್ಲೆಯಲ್ಲಿಯಲ್ಲಿಯೇ ಹಾಯಾಗಿ ಕೆಲಸ ಮಾಡಿಕೊಂಡಿರುವ ಡಿಡಿಪಿಐ ಮತ್ತು ಬಿಇಒಗಳಿಗೆ ಬಿಸಿ ಮುಟ್ಟಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಡಿಡಿಪಿಐ ಮತ್ತು ಬಿಇಒಗಳು ತವರು ಜಿಲ್ಲೆಯಲ್ಲಿ ಕೆಲಸ ಮಾಡುವಂತಿಲ್ಲ ಎಂಬ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಎಂದು ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಭಾನುವಾರ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಅನೇಕ ಡಿಡಿಪಿಐ ಮತ್ತು ಬಿಇಒಗಳು ಎಂಟು ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದರು. [ಶಿಕ್ಷಕರಾಗಲು ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಕಡ್ಡಾಯ]

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಪಿಐ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ)ಗಳು ತವರು ಜಿಲ್ಲೆಯಲ್ಲಿ ಕಾರ್ವನಿರ್ವಹಿಸುವಂತಿಲ್ಲ ಎಂಬ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರು ಹೇಳಿದರು. [ಶಿಕ್ಷಣ ಸಚಿವರ ಬಾಯಲ್ಲಿ ಎಂಥಾ ಮಾತು!]
ಸರ್ಕಾರ ಮೊದಲು ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲಿದ್ದು, ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. ಒಂದೇ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಸಮೀಪದ ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡುವ ಚಿಂತನೆ ಇದೆ ಎಂದರು.
ಮಧ್ಯಂತರ ಪರೀಕ್ಷೆ : ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ತಿಳಿಯಲು ಮಧ್ಯಂತರ ಸಾರ್ವತ್ರಿಕ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಈ ಪರೀಕ್ಷೆಯಲ್ಲಿ ಮೌಲ್ಯ ಮಾಪನ ಎಂಬುದು ಇರುವುದಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿ ತಿಳಿದುಕೊಳ್ಳಲು ಮಾತ್ರ ಈ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.











Click it and Unblock the Notifications