ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್-ಜೆಇಇ ಪರೀಕ್ಷೆ ತರಬೇತಿ, ಶಿವಮೊಗ್ಗದಲ್ಲೂ ಕಾರ್ಯಕ್ರಮ ಜಾರಿ
ಶಿವಮೊಗ್ಗ, ಅಕ್ಟೋಬರ್ 10: ಬೆಳಗಾವಿಯಲ್ಲಿ ಸದ್ಯ ಜಾರಿಯಲ್ಲಿರುವ 'ಸಿಇಟಿ-ಸಕ್ಷಮ್' ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಸರ್ಕಾರಿ ಪದವಿಪೂರ್ವ ಮಹಾ ವಿದ್ಯಾಲಯಗಳ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ನೀಟ್-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುವ ಕಾರ್ಯಕ್ರಮವಿದು. ಶಿವಮೊಗ್ಗ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮ ಶೀಘ್ರವೇ ಜಾರಿಗೆ ಬರಲಿದೆ. ಇದಕ್ಕಾಗಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಅವರ ಬಳಿ ಶಿವಮೊಗ್ಗದ ತಂಡ ಮಾಹಿತಿಯನ್ನು ಪಡೆದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 'ಸಿಇಟಿ-ಸಕ್ಷಮ್' ಕಾರ್ಯಕ್ರಮ ಅಳವಡಿಸಿಕೊಳ್ಳಬೇಕು ಎಂದು ಪ್ರೊಬೆಷನರಿ ಐಎಎಸ್ ಅಧಿಕಾರಿ ದೃಷ್ಠಿ ಜೇಸ್ವಾಲ್ ನೇತೃತ್ವದ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪ್ರಾಂಶುಪಾಲರಾದ ರವಿಶಂಕರ್, ಡಾ. ಜಿ. ಎಸ್. ಸಿದ್ಧಲಿಂಗಮೂರ್ತಿ, ಅರವಿಂದ ಕುಮಾರ್ ಕೆ., ವಾಸುದೇವ ಕೆ. ಎಚ್., ಉಪನ್ಯಾಸಕರಾದ ರಾಜೇಶ್ ಬೋಳಾರ್, ಜಾಕೀರ್ ಹುಸೇನ್, ಫ್ರಾನ್ಸಿಸ್ ಬೆಂಜಬಿನ್ ಮುಂತಾದವರನ್ನು ಒಳಗೊಂಡ ತಂಡ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿತ್ತು.

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಭೇಟಿ ಮಾಡಿ ಸಮಗ್ರ ಮಾಹಿತಿ ಪಡೆದುಕೊಂಡಿದೆ. ಅಲ್ಲದೇ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಮ್. ಎಮ್. ಕಾಂಬಳೆ ಹಾಗೂ ಕಛೇರಿ ಸಿಬ್ಬಂದಿಗಳು ಕೂಡ ಕಾಯಕ್ರಮದ ಮಾಹಿತಿಯನ್ನು ತಂಡಕ್ಕೆ ವಿವರಿಸಿದ್ದಾರೆ.
ಏನಿದು ಸಿಇಟಿ-ಸಕ್ಷಮ್ ಕಾರ್ಯಕ್ರಮ?; ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ನೀಟ್-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 'ಸಿಇಟಿ-ಸಕ್ಷಮ್' ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮ ಈಗ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.
ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಕುರಿತು ಅಧ್ಯಯನಕ್ಕಾಗಿ ಶಿವಮೊಗ್ಗ ಜಿಲ್ಲೆಯ ತಂಡವು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದೆ. ಬೆಳಗಾವಿ ಜಿಲ್ಲೆಯ ಉಪ ನಿರ್ದೇಶಕರ ಕಾರ್ಯಾಲಯ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಕಚೇರಿಯಲ್ಲಿ ಕಾರ್ಯಕ್ರಮದ ಕಾರ್ಯವಿಧಾನವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ.
ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ 'ಸಿಇಟಿ-ಸಕ್ಷಮ್' ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ರಾಜ್ಯ ಮಟ್ಟದಲ್ಲಿಯೂ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಬಡವರ್ಗದ ವಿದ್ಯಾರ್ಥಿಗಳಿಗಾಗಿ ಸಿಇಒ ರಾಹುಲ್ ಶಿಂಧೆ ರೂಪಿಸಿದ ಈ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆಯಲ್ಲಿಯೂ ಅನುಷ್ಠಾನವಾಗಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ತಂಡ ಮಾಹಿತಿ ಕಲೆ ಹಾಕಿದೆ, ಶೀಘ್ರವೇ ಶಿವಮೊಗ್ಗದಲ್ಲಿಯೂ ಕಾರ್ಯಕ್ರಮ ಆರಂಭವಾಗಲಿದೆ.
ಒಂದು ಕಡೆ ಸರ್ಕಾರ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಸೇರಲು ಸಿಇಟಿ, ನೀಟ್ ಪರೀಕ್ಷೆಗೆ ತಯಾರಾಗಬೇಕಿದೆ ಎಂದು ಬಯಸಿದೆ. ಅದಕ್ಕಾಗಿ ಸರ್ಕಾರಿ ಕಾಲೇಜುಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿನ ವಿಧ್ಯಾರ್ಥಿಗಳು ಉನ್ನತ ಹುದ್ದೆ ಸ್ಥಾನ ಮಾನವನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರದಿಂದಲೇ ನೀಟ್, ಸಿಇಟಿ ಕೋಚಿಂಗ್ ನೀಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು ರಾಜ್ಯ ಸರ್ಕಾರ 12 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ನೀಟ್, ಸಿಇಟಿ, ಜೆಇಇ ಮತ್ತು ಇತರ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕವನ್ನು ಪಾವತಿಸಿ ಕಾಲೇಜು ಹಂತದಲ್ಲಿಯೇ ತರಬೇತಿ ಪಡೆಯುತ್ತಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ತರಬೇತಿ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿವರ್ಷ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು.












Click it and Unblock the Notifications