Champions Trophy: ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಆಯ್ಕೆ; ಬುಮ್ರಾ, ಶಮಿ ವಾಪಸ್
ಫೆಬ್ರವರಿ 18ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದರೆ, ಅನುಮಾನ ಎನ್ನಲಾಗಿದ್ದ ಜಸ್ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಏಕದಿನ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡದೇ ಇದ್ದರೂ ಶ್ರೇಯಸ್ ಅಯ್ಯರ್ ಮತ್ತೆ ತಂಡಕ್ಕೆ ಮರಳಿದ್ದಾರೆ.
ಶನಿವಾರ ಭಾರತ ತಂಡದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದು ಹಲವು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಮುಖ್ಯವಾಗಿ ಬುಮ್ರಾ ಗಾಯದ ಬಗ್ಗೆ ಮಹತ್ವದ ಅಪ್‌ಡೇಟ್ ಸಿಕ್ಕಿದ್ದು ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ಅಯ್ಯರ್ ವಾಪಸ್
ಅಶಿಸ್ತಿನ ಕಾರಣದಿಂದ ಬಿಸಿಸಿಐ ಒಪ್ಪಂದವನ್ನೇ ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಮತ್ತೆ ತಂಡಕ್ಕೆ ವಾಪಸಾತಿ ಮಾಡಿದ್ದಾರೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಇತ್ತೀಚೆಗೆ ನಡೆದ ದೇಶೀಯ ಟೂರ್ನಿಯಲ್ಲಿ ಕೂಡ ಅಯ್ಯರ್ ಆಡಿದ್ದು ಬಿಸಿಸಿಐ ಅವರನ್ನು ಆಯ್ಕೆ ಪರಿಗಣಿಸಿದೆ.
ನಾಯಕತ್ವದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದ್ದು ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಶುಭಮನ್ ಗಿಲ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಭವಿಷ್ಯದ ನಾಯಕನ ಹುಡುಕಾಟವನ್ನು ಬಿಸಿಸಿಐ ಆರಂಭಿಸಿದೆ.
ಮೊಹಮ್ಮದ್ ಸಿರಾಜ್ ತಂಡಕ್ಕೆ ಆಯ್ಕೆಯಾಗದ ಪ್ರಮುಖ ಆಟಗಾರ ಎನ್ನಬಹುದು. ಏಕದಿನ ಮಾದರಿಯಲ್ಲಿ ಸಿರಾಜ್ ಉತ್ತಮ ಪ್ರದರ್ಶನ ನೀಡಿದ್ದರು, ಶಮಿ ವಾಪಸಾದ ಬಳಿಕ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಸಿರಾಜ್ ಬಳಿ ತಂಡಕ್ಕೆ ಬೇಕಾದ ಕೌಶಲ್ಯ ಇಲ್ಲ ಎನ್ನುವ ಮೂಲಕ ನಾಯಕ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡದ್ದಕ್ಕೆ ಕಾರಣ ಕೂಡ ನೀಡಿದ್ದಾರೆ
ಆರಂಭಿಕ ಬ್ಯಾಟರ್ ಆಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಯಶಸ್ವಿ ಜೈಸ್ವಾಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಅವಕಾಶ ಸಿಕ್ಕಿಲ್ಲ.
ಆಲ್‌ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದರೂ ಅವರು ಸಂಪೂರ್ಣವಾಗಿ ಫಿಟ್ ಆದರೆ ಮಾತ್ರ ಆಡುವ ಅವಕಾಶ ಸಿಗಲಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.












Click it and Unblock the Notifications