Rohit Sharma: ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಲು ಆಗ್ರಹ
ಅಡಿಲೇಡ್ ಓವಲ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯನ್ನು 1-1ರಲ್ಲಿ ಸಮವಾಗಿಸಿದೆ. ಈ ಸೋಲಿನೊಂದಿಗೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಸೋಲಿನ ಬೆನ್ನಲ್ಲೇ ಅಭಿಮಾನಿಗಳು ಸಿಟ್ಟಾಗಿದ್ದು ರೋಹಿತ್ ಶರ್ಮಾ ನಾಯಕತ್ವವನ್ನು ಪ್ರಶ್ನೆ ಮಾಡಲಾಗುತ್ತಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಿದ್ದರು. ಪರ್ತ್ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತ ಭರ್ಜರಿ ಗೆಲುವು ಸಾಧಿಸಿತ್ತು, ಎರಡನೇ ಟೆಸ್ಟ್‌ನಲ್ಲಿ ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು.

ರೋಹಿತ್ ಶರ್ಮಾ ತಂಡಕ್ಕೆ ಬಂದಿದ್ದರಿಂದ ಬ್ಯಾಟಿಂಗ್ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ. ನಾಯಕತ್ವದಲ್ಲೂ ಅವರು ಅಷ್ಟು ಪರಿಣಾಮಕಾರಿಯಾಗಿಲ್ಲ ಎನ್ನುವ ಅಭಿಪ್ರಾಯ ಕೂಡ ಅಭಿಮಾನಿಗಳಿಂದ ವ್ಯಕ್ತವಾಗಿದೆ.
ಫೈನಲ್ ತಲುಪುವುದು ಕಷ್ಟ!
ಕಳೆದ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿದ್ದ ಭಾರತ ಎರಡು ಬಾರಿಯೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿತ್ತು. ಮೂರನೇ ಬಾರಿ ಫೈನಲ್ ತಲುಪುವ ರೇಸ್‌ನಲ್ಲಿರುವ ಭಾರತಕ್ಕೆ ಅಡಿಲೇಡ್ ಸೋಲು ಅಡ್ಡಿಯಾಗುವ ಆತಂಕ ಎದುರಾಗಿದೆ. ಇದಕ್ಕೂ ಮುನ್ನ ಭಾರತ ನ್ಯೂಜಿಲೆಂಡ್ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಸೋತು ಕೆಟ್ಟ ದಾಖಲೆ ಬರೆದಿದೆ. ಈ ಮೂರು ಪಂದ್ಯಗಳಲ್ಲಿ ಸೋತಿದ್ದು ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ದೊಡ್ಡ ಹೊಡೆತ ಕೊಟ್ಟಿದೆ. ಫೈನಲ್ ತಲುಪಲು ಭಾರತ ಆಸ್ಟ್ರೇಲಿಯಾ ವಿರುದ್ದ ಉಳಿದಿರುವ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ.
ಬೌಲರ್ ಗಳ ವಿರುದ್ಧ ಕಿಡಿಕಾರಿದ ರೋಹಿತ್
ಅಡಿಲೇಡ್ ಟೆಸ್ಟ್ ಸೋಲಿನ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ "ಆಸ್ಟ್ರೇಲಿಯಾಗೆ ಬಂದಾಗ ಪಿಂಕ್ ಬಾಲ್ ಟೆಸ್ಟ್ ಆಡಬೇಕು ಎಂದು ನಮಗೆ ಮೊದಲೇ ಗೊತ್ತಿತ್ತು. ಆದರೆ ನಾವು ಉತ್ತಮ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ನಮಗಿಂತ ಚನ್ನಾಗಿ ಆಡಿದೆ. ನಮ್ಮ ಯೋಜನೆಗಳು ವಿಫಲವಾಗಿವೆ ಎಂದು ಹೇಳಿದ್ದಾರೆ.
ಟೆಸ್ಟ್ ಪಂದ್ಯದಲ್ಲಿ ಗೆಲ್ಲಬೇಕು ಎಂದರೆ ದೊಡ್ಡ ಮೊತ್ತದ ರನ್ ಕಲೆಹಾಕಬೇಕು. ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 30 ರಿಂದ 40 ರನ್‌ಗಳು ಕಡಿಮೆಯಾಗಿದ್ದವು. ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವಾಗ ಉತ್ತಮವಾಗಿ ಫೀಲ್ಡಿಂಗ್ ಮಾಡದಿರುವುದು ಕೂಡ ಸೋಲಿಗೆ ಕಾರಣವಾಗಿದೆ ಎಂದು ಹೇಳಿದರು.
ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಪಂದ್ಯಗಳಲ್ಲಿ ಬುಮ್ರಾ ನಾಯಕರಾಗಬೇಕು ಎನ್ನುವ ಒತ್ತಾಯ ಕೂಡ ಕೇಳಿ ಬಂದಿದೆ. ಆದರೆ ಸದ್ಯದ ಬೆಳವಣಿಗೆ ಗಮನಿಸಿದರೆ ನಾಯಕತ್ವ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications