GT vs DC: ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಅಬ್ಬರಕ್ಕೆ ಕಂಗಾಲಾದ ಗುಜರಾತ್ ಟೈಟಾನ್ಸ್
ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಪ್ರದರ್ಶನ ನೀಡಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 17.3 ಓವರ್ ಗಳಲ್ಲಿ ಕೇವಲ 89 ರನ್‌ಗಳಿಗೆ ಆಲೌಟ್ ಆಯಿತು.

ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ದಾಳಿಗೆ ಗುಜರಾತ್ ಟೈಟಾನ್ಸ್ ಬ್ಯಾಟರ್ ಗಳು ತತ್ತರಿಸಿದರು. ರಶೀದ್ ಖಾನ್ 31 ರನ್, ರಾಹುಲ್ ತೆವಾಟಿಯಾ 10 ರನ್, ಸಾಯಿ ಸುದರ್ಶನ್ 12 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಗಳು ಕೂಡ ಎರಡಂಕಿ ಮೊತ್ತ ಗಳಿಸಲಿಲ್ಲ. ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಅತಿ ಕಡಿಮೆ ಮೊತ್ತ ಇದಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಮುಖೇಶ್ ಕುಮಾರ್ 2.3 ಓವರ್ ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದರು. ಇಶಾಂತ್ ಶರ್ಮಾ ಮತ್ತು ಟ್ರಿಸ್ಟನ್ ಸ್ಟಬ್ಸ್ ತಲಾ ಎರಡು ವಿಕೆಟ್ ಪಡೆದುಕೊಂಡರು. ಖಲೀಲ್ ಅಹ್ಮದ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್‌ಗೆ ಬೃಹತ್ ಗೆಲುವು
ಈ ಸುಲಭ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಸ್ಫೋಟಕ ಆರಂಭ ಪಡೆಯಿತು. ಜೇಕ್ ಫ್ರೇಸರ್ ಮೆಕ್‌ಗುರ್ಕ್ 10 ಎಸೆತಗಳಲ್ಲಿ 20 ರನ್ ಗಳಿಸಿದರು. ಪೃಥ್ವಿ ಶಾ 6 ಎಸೆತಗಳಲ್ಲಿ 7 ರನ್ ಗಳಿಸಿದರು. ಅಭಿಷೇಕ್ ಪೊರೆಲ್ 7 ಎಸೆತಗಳಲ್ಲಿ 15 ರನ್ ಗಳಿಸಿದರೆ, ಶೈ ಹೋಪ್ 19 ರನ್ ಗಳಿಸಿ ಔಟಾದರು. ರಿಷಬ್ ಪಂತ್ ಅಜೇಯ 16 ರನ್ ಮತ್ತು ಸುಮಿತ್ ಕುಮಾರ್ 9 ರನ್ ಗಳಿಸುವ ಮೂಲಕ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.
ಈ ಗೆಲುವಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ 9ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಜಿಗಿದಿದೆ. ಗುಜರಾತ್ ಟೈಟಾನ್ಸ್ 7ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಗೆಲುವು ಪ್ಲೇ ಆಫ್ ಅವಕಾಶವನ್ನು ಹೆಚ್ಚಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮುಂದಿನ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 20ರಂದು ಈ ಪಂದ್ಯ ನಡೆಯಲಿದೆ. ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.












Click it and Unblock the Notifications