Ind vs Aus: ಅಡಿಲೇಡ್ ಸವಾಲು ಗೆದ್ದ ಆಸ್ಟ್ರೇಲಿಯಾ; ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಭಾರತಕ್ಕೆ ಮುಖಭಂಗ
ಪರ್ತ್‌ನಲ್ಲಿ ಪರಾಕ್ರಮ ಮೆರೆದಿದ್ದ ಭಾರತ ಅಡಿಲೇಡ್‌ನಲ್ಲಿ ಸೋಲೊಪ್ಪಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲನೇ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಭಾರತ ಎರಡನೇ ಟೆಸ್ಟ್‌ನಲ್ಲಿ ಸೋಲು ಕಂಡಿದ್ದು, ಸರಣಿ 1-1 ಸಮಬಲಗೊಂಡಿದೆ. ಮೂರೇ ದಿನಕ್ಕೆ ಅಡಿಲೇಡ್ ಪಿಂಕ್ ಬಾಲ್ ಟೆಸ್ಟ್ ಮುಕ್ತಾಯವಾಗಿದ್ದು ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪರ್ತ್ ಸೋಲಿನ ಲೆಕ್ಕ ಚುಕ್ತಾ ಮಾಡಿದೆ.
ಅಡಿಲೇಡ್ ಓವಲ್‌ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟಾರ್ಕ್ ಬೌಲಿಂಗ್ ದಾಳಿಗೆ ಸಿಲುಕಿ 180 ರನ್‌ಗಳಿಗೆ ಆಲೌಟ್ ಆಗಿತ್ತು. ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆದರೆ, ಪಾಟ್ ಕಮ್ಮಿನ್ಸ್ ಮತ್ತು ಸ್ಕಾಟ್ ಬೊಲ್ಯಾಂಡ್ ತಲಾ 2 ವಿಕೆಟ್ ಪಡೆದುಕೊಂಡರು. ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 337 ರನ್ ಗಳಿಸಿ 157 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.

ಟ್ರಾವಿಸ್ ಹೆಡ್ 140 ರನ್ ಗಳಿಸುವ ಮೂಲಕ ಭಾರತಕ್ಕೆ ತಲೆನೋವಾದರು. ಮಾರ್ನಸ್ ಲಾಬುಶಾನೆ 64 ರನ್ ಗಳಿಸಿ ಆಸ್ಟ್ರೇಲಿಯಾಗೆ ನೆರವಾದರು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲವಾಯಿತು. 175 ರನ್‌ಗಳಿಗೆ ಆಲೌಟ್ ಆಗುವ ಮೂಲಕ 18 ರನ್‌ಗಳ ಮುನ್ನಡೆ ಪಡೆದುಕೊಂಡಿತು. ನಾಯಕ ಪಾಟ್ ಕಮ್ಮಿನ್ಸ್ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿದರು. ಸ್ಕಾಟ್ ಬೊಲ್ಯಾಂಡ್ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 2 ವಿಕೆಟ್ ಪಡೆದರು. ನಿತೀಶ್ ಕುಮಾರ್ ರೆಡ್ಡಿ 42 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳಿಂದ ಉತ್ತಮ ಪ್ರದರ್ಶನ ಬರಲಿಲ್ಲ.
ಎರಡನೇ ಇನ್ನಿಂಗ್ಸ್‌ನಲ್ಲಿ 19 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗೆಲುವಿನ ದಡ ಮುಟ್ಟಿತು. ಬ್ಯಾಟಿಂಗ್ ಮಾಡಲು ಕಷ್ಟಕರವಾಗಿದ್ದ ಪಿಚ್‌ನಲ್ಲಿ ಭರ್ಜರಿ ಶತಕ ಗಳಿಸಿದ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.
ಬ್ರಿಸ್ಬೇನ್ ಸವಾಲಿಗೆ ಸಜ್ಜು
ಈ ಗೆಲುವಿನ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿ 1-1 ರಲ್ಲಿ ಸಮಬಲಗೊಂಡಿದ್ದು, ಮುಂದಿನ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದೆ. ಬ್ರಿಸ್ಬೇನ್ ಐತಿಹಾಸಿಕ ಗಬ್ಬಾ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಡಿಸೆಂಬರ್ 14ರಂದು ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ದೃಷ್ಟಿಯಿಂದ ಈ ಸರಣಿಯನ್ನು ಗೆಲ್ಲುವುದು ಎರಡೂ ತಂಡಗಳಿಗೆ ಮಹತ್ವದ್ದಾಗಿದ್ದು, ಮೂರನೇ ಪಂದ್ಯ ಗೆಲ್ಲಲು ಎರಡೂ ತಂಡಗಳು ಸಜ್ಜಾಗಲಿವೆ.












Click it and Unblock the Notifications