IPL 2023 Final: ಚೆನ್ನೈ vs ಗುಜರಾತ್ ಮುಖಾಮುಖಿಯಲ್ಲಿ ಹೆಚ್ಚು ಗೆದ್ದ ತಂಡ ಯಾವುದು?

ಇಂದು ( ಮೇ 28 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಬ್ರೇಕ್ ಬೀಳಲಿದೆ. ಹೌದು, ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಈ ಬಾರಿಯ ಐಪಿಎಲ್ ಟೂರ್ನಿ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ.
ಇನ್ನು ಮಾರ್ಚ್ 31ರಂದು ನಡೆದಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳೇ ಈ ಬಾರಿಗ ಫೈನಲ್ ಆಡುವುದು ವಿಶೇಷವೆನಿಸಿದ್ದು, ಇದು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯವಾಗಿದೆ.
ಲೀಗ್ ಹಂತದ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದ್ದ ಗುಜರಾತ್ ಟೈಟನ್ಸ್ ಹಾಗೂ ಎರಡನೇ ಸ್ಥಾನವನ್ನು ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಪ್ಲೇಆಫ್‌ಗೆ ಯಶಸ್ವಿಯಾಗಿ ಲಗ್ಗೆ ಇಟ್ಟು ಮೊದಲನೆ ಕ್ವಾಲಿಫಯರ್ ಪಂದ್ಯದಲ್ಲಿ ಕಣಕ್ಕಿಳಿದವು.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ 15 ರನ್‌ಗಳ ಅಂತರದಿಂದ ಗೆದ್ದು ನೇರವಾಗಿ ಫೈನಲ್ ತಲುಪಿದರೆ, ಸೋತ ಗುಜರಾತ್ ಟೈಟನ್ಸ್ ಎರಡನೆ ಕ್ವಾಲಿಫಯರ್ ಪಂದ್ಯಕ್ಕೆ ಪ್ರವೇಶಿಸಿತು. ಇನ್ನು ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯವನ್ನು ಗೆದ್ದು ಬಂದಿದ್ದ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 62 ರನ್‌ಗಳ ಗೆಲುವನ್ನು ಸಾಧಿಸಿದ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿತು.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮೂರನೇ ಬಾರಿಗೆ ಕಣಕ್ಕಿಳಿಯಲಿದ್ದು, ಈ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು ಐದನೇ ಬಾರಿಗೆ ಚಾಂಪಿಯನ್ ಆಗುತ್ತಾ ಅಥವಾ ಗುಜರಾತ್ ಟೈಟನ್ಸ್ ತನ್ನ ಎರಡನೇ ಟ್ರೋಫಿ ಎತ್ತಿ ಹಿಡಿಯುತ್ತಾ ಎನ್ನುವ ಚರ್ಚೆ ಆರಂಭಗೊಂಡಿದೆ. ಇನ್ನು ಈ ಎರಡು ತಂಡಗಳು ಮುಖಾಮುಖಿಯಾದಾಗ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ಪೈಕಿ ಗುಜರಾತ್ ಟೈಟನ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಒಂದು ಪಂದ್ಯದಲ್ಲಿ ಗೆದ್ದಿದೆ.
ಮೊದಲಿಗೆ ಕಳೆದ ವರ್ಷದ ಲೀಗ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದಾಗ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 170 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದ ಗುಜರಾತ್ ಟೈಟನ್ಸ್ 19.5 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿ 3 ವಿಕೆಟ್‌ಗಳ ರೋಚಕ ಗೆಲುವನ್ನು ಕಂಡಿತ್ತು.
ಬಳಿಕ ಅದೇ ಆವೃತ್ತಿಯಲ್ಲಿ ಮತ್ತೊಂದು ಲೀಗ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದಾಗಲೂ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ್ದ ಗುಜರಾತ್ ಟೈಟನ್ಸ್ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 137 ರನ್ ಕಲೆಹಾಕಿ 7 ವಿಕೆಟ್‌ಗಳ ಗೆಲುವನ್ನು ಕಂಡಿತ್ತು.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮೂರನೇ ಬಾರಿಗೆ ಇತ್ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿಯೂ ಸಹ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿತ್ತು ಹಾಗೂ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ ಗುಜರಾತ್ ಟೈಟನ್ಸ್‌ಗೆ 179 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿ ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದ ಗುಜರಾತ್ ಟೈಟನ್ಸ್ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿತ್ತು.
ಇತ್ತೀಚೆಗಷ್ಟೆ ನಡೆದ ಈ ಬಾರಿಯ ಐಪಿಎಲ್ ಟೂರ್ನಿಯ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 173 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಗುಜರಾತ್ ಟೈಟನ್ಸ್ 157 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 15 ರನ್‌ಗಳ ಗೆಲುವನ್ನು ಕಂಡು ಅದೇ ಮೊದಲ ಬಾರಿಗೆ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದಿತ್ತು.












Click it and Unblock the Notifications