IPL 2023: SRH vs LSG ಕೊನೆಯ ಬಾರಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಮೇ 13 ) ಶನಿವಾರ ಎರಡು ಪಂದ್ಯಗಳು ಆಯೋಜನೆಗೊಂಡಿವೆ.
ಲೀಗ್‌ನ 58ನೇ ಪಂದ್ಯ ಮಧ್ಯಾಹ್ನ ಆರಂಭಗೊಳ್ಳಲಿದ್ದು ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾದರೆ, ಸಂಜೆ ನಡೆಯಲಿರುವ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಸನ್ ರೈಸರ್ಸ್ ಹೈದರಾಬಾದ್ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು 11 ಪಂದ್ಯಗಳನ್ನಾಡಿವೆ. ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.
ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಉಳಿದೊಂದ ಪಂದ್ಯ ರದ್ದಾದ ಕಾರಣ ಒಂದು ಅಂಕ ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಟ್ಟು 11 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಐದನೇ ಸ್ಥಾನದಲ್ಲಿದೆ.
ಅತ್ತ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿರುವ ಪಂದ್ಯ ಇದಾಗಿದ್ದು, ಪಂದ್ಯದಲ್ಲಿ ಯಾವ ತಂಡ ಗೆದ್ದು ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಲೀಗ್ ಹಂತದಲ್ಲಿ ಏಪ್ರಿಲ್ 7ರಂದು ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಕಲೆಹಾಕಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 122 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ 16 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಕಲೆಹಾಕಿತ್ತು.
ಇನ್ನು ಈ ಪಂದ್ಯಕ್ಕೂ ಮುನ್ನ ಇತ್ತಂಡಗಳು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 12 ರನ್‌ಗಳ ಗೆಲುವನ್ನು ದಾಖಲಿಸಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 170 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿತ್ತು.
ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಒಟ್ಟು ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ಪಂದ್ಯಗಳಲ್ಲಿಯೂ ಸಹ ಲಕ್ನೋ ಸೂಪರ್ ಜೈಂಟ್ಸ್ ತಂಡವೇ ಗೆಲುವು ಕಂಡಿದೆ.












Click it and Unblock the Notifications