IPL 2023: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ಮುಖಾಮುಖಿಯಲ್ಲಿ ಯಾವ ತಂಡ ಸ್ಟ್ರಾಂಗ್?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 30 ) ಡಬಲ್ ಹೆಡರ್ ಆಯೋಜನೆಯಾಗಿದೆ.
ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ಚೆನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಂಜೆ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ರಾಜಸ್ಥಾನ್ ರಾಯಲ್ಸ್ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿ 5 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
ಹೀಗೆ ಐದು ಬಾರಿ ಚಾಂಪಿಯನ್ಸ್ ಆಗಿರುವ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ರಾಜಸ್ಥಾನ್ ರಾಯಲ್ಸ್ ತಂಡ ಉತ್ತಮ ಹಂತದಲ್ಲಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಎಷ್ಟು ಪಂದ್ಯಗಳು ಜರುಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಉಳಿದೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ.
ಇನ್ನು ಈ ಪಂದ್ಯ ಇತ್ತಂಡಗಳ ನಡುವೆ ನಡೆಯುತ್ತಿರುವ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಮುಖಾಮುಖಿ ಪಂದ್ಯವಾಗಿದ್ದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಪೈಕಿ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 22 ರನ್‌ಗಳ ಗೆಲುವನ್ನು ಕಂಡಿತ್ತು ಹಾಗೂ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 5 ವಿಕೆಟ್‌ಗಳ ಗೆಲುವನ್ನು ಕಂಡಿತ್ತು.
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಸಹ ಇತ್ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು ಹಾಗೂ ಎರಡೂ ಬಾರಿಯೂ ಸಹ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲನ್ನು ಉಣಿಸಿತ್ತು.
ಹೀಗೆ ಕಳೆದ ನಾಲ್ಕು ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಈ ಬಾರಿಯ ಟೂರ್ನಿಯ ಗೆಲುವಿನ ಅಂಕಿಅಂಶದಲ್ಲಿ ರಾಜಸ್ಥಾನ್ ರಾಯಲ್ಸ್ ಮುಂದಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿಕೆ ಕಾಣಲಿದ್ದು, ಗೆಲ್ಲುವತ್ತ ಚಿತ್ತ ನೆಟ್ಟಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಹುಟ್ಟುಹಬ್ಬವೂ ಸಹ ಇದೇ ದಿನವಿದ್ದು, ಮುಂಬೈ ಇಂಡಿಯನ್ಸ್ ಬಳಗ ಇಂದು ಗೆಲ್ಲುವ ಮೂಲಕ ರೋಹಿತ್ ಶರ್ಮಾಗೆ ಹುಟ್ಟುಹಬ್ಬದ ಉಡುಗೊರೆ ನೀಡುವುದರ ಜತೆಗೆ ಕಮ್‌ಬ್ಯಾಕ್ ಮಾಡುವ ಗುರಿಯನ್ನೊಂದಿದೆ.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತ್ತು ಹಾಗೂ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟನ್ಸ್ 55 ರನ್‌ಗಳ ಸೋಲನ್ನು ಕಂಡಿತ್ತು ಹಾಗೂ ಅದಕ್ಕೂ ಮುನ್ನ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ಸಹ ಮುಂಬೈ ಇಂಡಿಯನ್ಸ್ ಸೋಲನುಭವಿಸಿತ್ತು.












Click it and Unblock the Notifications